ಬೆಂಗಳೂರು: ಯಾದಗಿರಿ ಜಿಲ್ಲೆಯ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕೈಗಾರಿಕೆಗಳಿಂದ ಸಂಸ್ಕರಿಸದ ಕಲುಷಿತ ನೀರನ್ನು ನೇರವಾಗಿ ಭೀಮಾ ನದಿಗೆ ಹರಿಸುತ್ತಿರುವ ಗಂಭೀರ ಪ್ರಕರಣವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ.
ನಿಯಮ ಉಲ್ಲಂಘಿಸಿರುವ ಕೈಗಾರಿಕೆಗಳ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಕರ್ತವ್ಯ ಲೋಪವೆಸಗಿದ ಅಧಿಕಾರಿಯನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಿ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ತುರ್ತು ನಿರ್ದೇಶನ ನೀಡಿದ್ದಾರೆ.
ಪರಿಸರ ಹಾಗೂ ಸಾರ್ವಜನಿಕರ ಆರೋಗ್ಯದ ಮೇಲೆ ತೀವ್ರ ಪರಿಣಾಮ
ಕೈಗಾರಿಕೆಗಳಿಂದ ಹೊರಬರುವ ವಿಷಕಾರಿ ತ್ಯಾಜ್ಯ ನೀರನ್ನು ಯಾವುದೇ ಸೂಕ್ತ ಸಂಸ್ಕರಣೆ ಮಾಡದೆ ನದಿ ಹಾಗೂ ಸುತ್ತಮುತ್ತಲಿನ ಜಲಮೂಲಗಳಿಗೆ ಹರಿಸಲಾಗುತ್ತಿರುವುದು ತೀವ್ರ ಕಳವಳಕಾರಿ ಸಂಗತಿಯಾಗಿದೆ. ಇಂತಹ ಅಪಾಯಕಾರಿ ತ್ಯಾಜ್ಯವು ನದಿ ಸೇರುವುದರಿಂದ ಭೀಕರ ಜಲಮಾಲಿನ್ಯ ಉಂಟಾಗುವುದರ ಜೊತೆಗೆ, ನದಿ ನೀರನ್ನೇ ನಂಬಿಕೊಂಡಿರುವ ಸ್ಥಳೀಯ ಜನರು ಮತ್ತು ಜಾನುವಾರುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಇದರೊಂದಿಗೆ ಕೃಷಿ ಚಟುವಟಿಕೆಗಳು ಹಾಗೂ ಒಟ್ಟಾರೆ ನೈಸರ್ಗಿಕ ಪರಿಸರಕ್ಕೂ ಭಾರಿ ಹಾನಿಯಾಗಲಿದ್ದು, ಇಂತಹ ಅವಘಡಗಳನ್ನು ಆರಂಭದಲ್ಲೇ ತಡೆಗಟ್ಟುವುದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮೊದಲ ಕರ್ತವ್ಯವಾಗಿದೆ ಎಂದು ಸಚಿವರು ತಮ್ಮ ಟಿಪ್ಪಣಿಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಸ್ಥಳ ಪರಿಶೀಲನೆ ಮತ್ತು ನೀರಿನ ಮಾದರಿ ಪರೀಕ್ಷೆಗೆ ತಾಕೀತು
ಪ್ರಕರಣದ ಬೆನ್ನಲ್ಲೇ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳ ತಂಡ ತಕ್ಷಣವೇ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಬೇಕು. ಅಲ್ಲಿನ ಕೈಗಾರಿಕೆಗಳಿಂದ ಹೊರಬರುತ್ತಿರುವ ತ್ಯಾಜ್ಯ ನೀರಿನ ಮಾದರಿಗಳನ್ನು ಕೂಡಲೇ ಸಂಗ್ರಹಿಸಿ ಪ್ರಯೋಗಾಲಯದಲ್ಲಿ ಕಟ್ಟುನಿಟ್ಟಿನ ಗುಣಮಟ್ಟ ಪರೀಕ್ಷೆಗೆ ಒಳಪಡಿಸಬೇಕು. ಪರಿಸರ ನಿಯಮಾವಳಿಗಳನ್ನು ಗಾಳಿಗೆ ತೂರಿ ಪರಿಸರ ಹಾನಿಗೆ ಕಾರಣವಾಗಿರುವ ಕೈಗಾರಿಕೆಗಳನ್ನು ಗುರುತಿಸಿ, ಯಾವುದೇ ಮುಲಾಜಿಲ್ಲದೆ ಹಾಗೂ ವಿಳಂಬ ಮಾಡದೆ ಕಾನೂನುಬದ್ಧವಾಗಿ ಕಠಿಣ ಶಿಕ್ಷಾರ್ಹ ಕ್ರಮಗಳನ್ನು ಜರುಗಿಸಬೇಕು ಎಂದು ಸೂಚಿಸಲಾಗಿದೆ.
ನಿರ್ಲಕ್ಷ್ಯ ವಹಿಸಿದ ಅಧಿಕಾರಿಯ ಅಮಾನತು ಮತ್ತು ಕಟ್ಟುನಿಟ್ಟಿನ ಕ್ರಮ
ಈ ರೀತಿಯ ಅಕ್ರಮ ಹಾಗೂ ಹೊಣೆಗೇಡಿತನದ ಚಟುವಟಿಕೆಗಳು ನಡೆಯುತ್ತಿದ್ದರೂ ಗಮನಿಸದೆ ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿದ ಸಂಬಂಧಪಟ್ಟ ಅಧಿಕಾರಿಯನ್ನು ಈ ಕೂಡಲೇ ಅಮಾನತುಗೊಳಿಸಬೇಕು. ನಂತರ ಅವರ ವಿರುದ್ಧ ನಿಯಮಾನುಸಾರ ಇಲಾಖಾ ವಿಚಾರಣೆ ನಡೆಸಿ ಸಮಗ್ರ ಅನುಸರಣಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಮಂಡಳಿಯ ಸದಸ್ಯ ಕಾರ್ಯದರ್ಶಿ ಆರ್. ಗೋಕುಲ್ ಅವರಿಗೆ ಸಚಿವರು ಆದೇಶಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದ ಯಾವುದೇ ಭಾಗದಲ್ಲೂ ಇಂತಹ ಪರಿಸರ ಮಾರಕ ಘಟನೆಗಳು ಮರುಕಳಿಸದಂತೆ ನಿರಂತರ ನಿಗಾ ವಹಿಸಲು ಮಂಡಳಿಗೆ ಕಟ್ಟುನಿಟ್ಟಿನ ಸೂಚನೆ ರವಾನಿಸಲಾಗಿದೆ.