ಮಂಡ್ಯ: ಕ್ರೀಡಾಪಟುಗಳು ಸೋಲನ್ನೇ ಸವಾಲಾಗಿ ಸ್ವೀಕರಿಸಿ ಕಠಿಣ ಪರಿಶ್ರಮಪಟ್ಟು ಜೀವನದಲ್ಲಿ ಅದ್ವಿತೀಯ ಸಾಧನೆ ಮಾಡಬೇಕೆಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ಮದ್ದೂರು ನಗರದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 2026-27 ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ನಿರಂತರ ಅಭ್ಯಾಸ ಮುಖ್ಯವಾಗಿರುತ್ತದೆ. ಒಂದೊಮ್ಮೆ ಸೋತರು ಛಲ ಬಿಡೆದ ಅಭ್ಯಾಸ ಮುಂದುವರೆಸಿದರೆ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಯಶಸ್ಸು ಸಾಧಿಸಬಹುದು ಎಂದು ಕಿವಿ ಮಾತು ಹೇಳಿದರು.
ಗ್ರಾಮಾಂತರ ಪ್ರದೇಶದ ಕ್ರೀಡಾಪಟುಗಳಲ್ಲಿ ಆಗಾಧವಾದ ಪ್ರತಿಭೆಯಿದ್ದು, ಇವರಿಗೆ ಸೂಕ್ತ ಮಾರ್ಗದರ್ಶನ ಮತ್ತು ತರಬೇತಿ ನೀಡಿದರೆ ಅತ್ಯುತ್ತಮ ಸಾಧನೆ ಮಾಡಲಿದ್ದಾರೆ. ಇಂತವರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕಾಗಿದೆ ಎಂದರು.
ನಗರ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಿಂದ ಸುಮಾರು 600 ಕ್ಕೂ ಹೆಚ್ಚು ಕ್ರೀಡಾಸಕ್ತರು ಭಾಗವಹಿಸಿ ಅಥ್ಲೆಟಿಕ್ಸ್, ವಾಲಿಬಾಲ್, ಖೋಖೋ, ಕಬಡ್ಡಿ, ಫುಟ್ಬಾಲ್, ಥ್ರೋಬಾಲ್, ಯೋಗ ಕ್ರೀಡೆ ಸೇರಿದಂತೆ ಇನ್ನಿತರರ ಕ್ರೀಡೆಗಳಲ್ಲಿ ಭಾಗವಹಿಸಿ ಕ್ರೀಡಾ ಸ್ಫೂರ್ತಿ ಮೆರೆದರು. ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.
ಇದೇ ವೇಳೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ವೈ.ಸಿ.ಮನುಜಶ್ರೀ, ದೈಹಿಕ ಶಿಕ್ಷಣ ಪರಿವೀಕ್ಷಕ ಲೋಕೇಶ್, ಮೋಹನ್, ಪ್ರದೀಪ್, ಮಹದೇವ, ಕುಮಾರ್, ನಂದೀಶ್ ಇದ್ದರು.