ಬೆಂಗಳೂರು: ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ಮತ್ತಷ್ಟು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಹಾಗೂ ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳನ್ನು ರಚಿಸುವ ಪ್ರಕ್ರಿಯೆಯನ್ನು 15 ದಿನಗಳೊಳಗೆ ಪೂರ್ಣಗೊಳಿಸಬೇಕು ಎಂದು ಸರ್ಕಾರ ಗಡುವು ನೀಡಿದೆ.
ಈ ಸಂಬಂಧ ಪ್ರಜಾಸೇವಾ ಇಲಾಖೆ ಆದೇಶ ಹೊರಡಿಸಿದೆ ನಗರದಲ್ಲಿ ವಾರ್ಡ್‌ಗಳ ಮಟ್ಟದ ಸಮಿತಿಗಳನ್ನು ರಚಿಸುವ ಜವಾಬ್ದಾರಿಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಸಮಿತಿಗಳನ್ನು ರಚಿಸುವ ಜವಾಬ್ದಾರಿಯನ್ನು ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವಹಿಸಲಾಗಿದೆ.
ಸಮಿತಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. 15 ದಿನಗಳೊಳಗೆ ನೇಮಕಾತಿ ಆದೇಶ ಹೊರಡಿಸದಿದ್ದಲ್ಲಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರೇ, ಸದಸ್ಯರನ್ನು ನೇಮಕ ಮಾಡಲು ಅಧಿಕಾರ ಹೊಂದಿರುತ್ತಾರೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂಬುದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಹಾಗೂ ನಗರಗಳಲ್ಲಿ ವಾರ್ಡ್ ಮಟ್ಟದಲ್ಲಿ 6 ಜನ ಸದಸ್ಯರನ್ನು ಒಳಗೊಂಡ ಸಮಿತಿಗಳನ್ನು ರಚನೆ ಮಾಡಬೇಕೆಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೂಚನೆ ನೀಡಿದ್ದರು. ಪ್ರತಿ ಸಮಿತಿಯಲ್ಲಿ ಎಸ್‌ಸಿ/ಎಸ್‌ಟಿ–1, ಅಲ್ಪಸಂಖ್ಯಾತರು–1, ಮಹಿಳೆಯರು–2, ಹಿಂದುಳಿದ ವರ್ಗ–1 ಹಾಗೂ ಸಾಮಾನ್ಯ ವರ್ಗ–1 ಸದಸ್ಯರಿಗೆ ಪ್ರಾತಿನಿಧ್ಯ ಕಲ್ಪಿಸಲಾಗುತ್ತದೆ. ಅಲ್ಪಸಂಖ್ಯಾತರ ಪ್ರಾತಿನಿಧ್ಯ ಲಭ್ಯವಿಲ್ಲದ ಸಂದರ್ಭದಲ್ಲಿ ಸಾಮಾನ್ಯ ವರ್ಗದಿಂದ ಸದಸ್ಯರನ್ನು ನೇಮಿಸಲು ಅವಕಾಶವಿದೆ. ಇದರಿಂದ ಸ್ಥಳೀಯ ಮಟ್ಟದಲ್ಲಿ ಯೋಜನೆಗಳ ಅನುಷ್ಠಾನವನ್ನು ಪರಿಶೀಲಿಸುವುದರ ಜೊತೆಗೆ ಫಲಾನುಭವಿಗಳ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ತ್ವರಿತ ಪರಿಹಾರ ಕಲ್ಪಿಸಬಹುದು. - ದಿನೇಶ್ ಗೂಳಿಗೌಡ, ಉಪಾಧ್ಯಕ್ಷರು, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ.
