ನವದೆಹಲಿ: 19ನೇ ರೋಜ್‌ಗಾರ್ ಮೇಳ ಇಂದು ನಡೆಯಲಿದ್ದು, ಪ್ರಧಾನಿ Narendra Modi ಅವರು 51,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ ಕಾರ್ಯಕ್ರಮವು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದ್ದು, ದೇಶದ 42 ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆಯಲಿದೆ. ಪ್ರಧಾನಿ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ಹಸ್ತಾಂತರಿಸಲಿದ್ದಾರೆ.
ವಿವಿಧ ಸರ್ಕಾರಿ ಸಚಿವಾಲಯಗಳು ಮತ್ತು ಸಂಸ್ಥೆಗಳಲ್ಲಿ ನೇಮಕಗೊಂಡ ಯುವಕರಿಗೆ 51 ಸಾವಿರಕ್ಕೂ ಹೆಚ್ಚು ಉದ್ಯೋಗ ಪತ್ರಗಳನ್ನು ವಿತರಿಸಲಾಗುತ್ತದೆ. ಯುವಕರಿಗೆ ಹೆಚ್ಚಿನ ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ಪ್ರಧಾನಿಯವರ ಬದ್ಧತೆಯ ಭಾಗವಾಗಿ ಈ ಮೇಳ ಆಯೋಜಿಸಲಾಗಿದೆ. ಈವರೆಗೆ ನಡೆದ 18 ಉದ್ಯೋಗ ಮೇಳಗಳ ಮೂಲಕ ಸುಮಾರು 12 ಲಕ್ಷಕ್ಕೂ ಅಧಿಕ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿ ಮಾಹಿತಿ ನೀಡಿದೆ.
ದೇಶದ ಯುವಜನತೆಗೆ ಉತ್ತಮ ಭವಿಷ್ಯ ನಿರ್ಮಿಸಲು ಸರ್ಕಾರ ಬದ್ಧವಾಗಿದೆ. ಇದೇ ಉದ್ದೇಶದೊಂದಿಗೆ ಇಂದು ಬೆಳಗ್ಗೆ 11 ಗಂಟೆಗೆ ನಡೆಯುವ ಉದ್ಯೋಗ ಮೇಳದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ವಿವಿಧ ಸರ್ಕಾರಿ ಇಲಾಖೆಗಳ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದೇನೆ ಎಂದು ಪ್ರಧಾನಿ ಮೋದಿ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.
ದೇಶದ ವಿವಿಧ ಭಾಗಗಳಿಂದ ಆಯ್ಕೆಯಾದ ಅಭ್ಯರ್ಥಿಗಳು ರೈಲ್ವೆ, ಗೃಹ ವ್ಯವಹಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಹಣಕಾಸು ಸೇವೆಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ ಸೇರಿದಂತೆ ಹಲವು ಸಚಿವಾಲಯಗಳು ಮತ್ತು ಕೇಂದ್ರ ಇಲಾಖೆಗಳ ಸೇವೆಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.