ಶಿವಮೊಗ್ಗ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ಕಾಮಗಾರಿಗಳಿಗೆ ಸರಬರಾಜು ಮಾಡಿದ ಸಾಮಗ್ರಿಗಳ ಬಾಕಿ ಹಣ ಕಳೆದ ಎರಡು ವರ್ಷಗಳಿಂದ ಬಿಡುಗಡೆಯಾಗದ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯ ನರೇಗಾ ಸಾಮಗ್ರಿ ಪೂರೈಕೆದಾರರು ಕಂಗಾಲಾಗಿದ್ದಾರೆ.
ಬರಬೇಕಾದ ಕೋಟ್ಯಂತರ ರೂಪಾಯಿ ಹಣವನ್ನು ಕೂಡಲೇ ಬಿಡುಗಡೆ ಮಾಡದಿದ್ದರೆ ಕುಟುಂಬ ಸಮೇತ ವಿಷ ಸೇವಿಸಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನೊಂದ ಸರಬರಾಜುದಾರರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯಪಾಲಕ ಎಂಜಿನಿಯರ್‌ಗೆ ತೀವ್ರ ಎಚ್ಚರಿಕೆ ರವಾನಿಸಿದ್ದಾರೆ.
ಎರಡು ವರ್ಷಗಳಿಂದ ಬಾರದ ಹಣ, ಬೀದಿಗೆ ಬಿದ್ದ ಕುಟುಂಬಗಳು
ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ (ಪಿ.ಆರ್.ಇ.ಡಿ) ವ್ಯಾಪ್ತಿಯ ಲೈನ್ ಕಾಮಗಾರಿಗಳಿಗೆ ಸಾಮಗ್ರಿ ಸರಬರಾಜು ಮಾಡಿದ ಗುತ್ತಿಗೆದಾರರಿಗೆ ಕಳೆದ ಎರಡು ವರ್ಷಗಳಿಂದ ಸರ್ಕಾರದಿಂದ ನಯಾಪೈಸೆ ಬಿಡುಗಡೆಯಾಗಿಲ್ಲ. ಕಾಮಗಾರಿಗಾಗಿ ಹೊರಗಡೆ ತಂದ ಸಾಲಕ್ಕೆ ಬಡ್ಡಿ ಕಟ್ಟಲಾಗದೆ ವ್ಯಾಪಾರಿಗಳು ಕಂಗಾಲಾಗಿದ್ದಾರೆ. ಬ್ಯಾಂಕುಗಳಲ್ಲಿ ಅಡವಿಟ್ಟ ಚಿನ್ನಾಭರಣಗಳು ಹರಾಜು ಹಂತಕ್ಕೆ ತಲುಪಿದ್ದು, ಪ್ರತಿ ತಿಂಗಳು ಕಟ್ಟಬೇಕಾದ ಇಎಂಐ ಚೆಕ್‌ಗಳು ಬೌನ್ಸ್ ಆಗುತ್ತಿವೆ. ದಿನನಿತ್ಯದ ಸಂಸಾರ ನಿರ್ವಹಣೆ, ಮಕ್ಕಳ ಶಾಲಾ ಶುಲ್ಕ ಹಾಗೂ ಆಸ್ಪತ್ರೆ ವೆಚ್ಚಗಳನ್ನು ಭರಿಸಲೂ ಸಾಧ್ಯವಾಗದೆ ಪರದಾಡುವಂತಾಗಿದೆ. ಸಾಲ ಕೊಟ್ಟವರು ಮತ್ತು ಬ್ಯಾಂಕ್ ಸಿಬ್ಬಂದಿ ಮನೆ ಬಾಗಿಲಿಗೆ ಬಂದು ನಿಲ್ಲುತ್ತಿದ್ದು, ಕುಟುಂಬಗಳು ನಿರಂತರ ಮಾನಸಿಕ ಹಾಗೂ ದೈಹಿಕ ಕಿರುಕುಳ ಅನುಭವಿಸುತ್ತಿವೆ ಎಂದು ಪತ್ರದಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ.
ಅಧಿಕಾರಿಗಳ ಸಬೂಬಿಗೆ ಆಕ್ರೋಶ
ಬಾಕಿ ಹಣ ಬಿಡುಗಡೆ ಮಾಡುವಂತೆ ಹಲವು ಬಾರಿ ಕಚೇರಿಗಳಿಗೆ ಅಲೆದರೂ ಅಧಿಕಾರಿಗಳು 'ಈ ವಾರ, ಮುಂದಿನ ವಾರ' ಎಂದು ಸಬೂಬು ಹೇಳುತ್ತಾ ಕಾಲಹರಣ ಮಾಡುತ್ತಿದ್ದಾರೆ. ಅಧಿಕಾರಿಗಳ ಈ ನಿರ್ಲಕ್ಷ್ಯ ಧೋರಣೆಯಿಂದ ಬೇಸತ್ತಿರುವ ಗುತ್ತಿಗೆದಾರರು, ಸದ್ಯದ ಪರಿಸ್ಥಿತಿಯಲ್ಲಿ ನಮಗೆ ಆತ್ಮಹತ್ಯೆಯೊಂದೇ ದಾರಿಯಾಗಿದೆ. ಆದ್ದರಿಂದ ತಕ್ಷಣವೇ ಶಿವಮೊಗ್ಗ ಜಿಲ್ಲೆಗೆ ಬರಬೇಕಾದ ಸುಮಾರು 5 ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಿ ಪೂರ್ಣ ಹಣ ಪಾವತಿಸಬೇಕು ಎಂದು ಆಗ್ರಹಿಸಿದ್ದಾರೆ.
7.12 ಕೋಟಿ ರೂ. ಬಾಕಿ ಪ್ರಸ್ತಾವನೆ
ನರೇಗಾ ಯೋಜನೆಯಡಿ ಜಿಲ್ಲೆಯ ಕೃಷಿ, ಅರಣ್ಯ, ತೋಟಗಾರಿಕೆ, ಎನ್‌ಆರ್‌ಎಲ್‌ಎಂ ಹಾಗೂ ಗ್ರಾಮೀಣಾಭಿವೃದ್ಧಿ ಇಂಜಿನಿಯರಿಂಗ್ ಉಪವಿಭಾಗಗಳಿಂದ ಸಾಮಗ್ರಿ ಅನುದಾನ ಬಿಡುಗಡೆಗಾಗಿ ಸಿದ್ಧಪಡಿಸಲಾದ ಪಟ್ಟಿಯ ಪ್ರಕಾರ ಒಟ್ಟು 7.12 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಅನುದಾನ ಬಾಕಿ ಉಳಿದಿರುವುದು ದಾಖಲೆಗಳಿಂದ ಸ್ಪಷ್ಟವಾಗಿದೆ.
ಉನ್ನತ ಮಟ್ಟದ ನಾಯಕರಿಗೆ ಮನವಿ ರವಾನೆ
ಈ ಸಂಬಂಧ ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಪೂರೈಕೆದಾರರು, ಸರ್ಕಾರದ ಗಮನ ಸೆಳೆಯಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಸಭಾಪತಿಗಳು, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕಿ ಶಾರದಾ ಪೂರ್ಯಾನಾಯ್ಕ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಉನ್ನತ ಅಧಿಕಾರಿಗಳಿಗೆ ಪತ್ರದ ಪ್ರತಿಯನ್ನು ರವಾನಿಸಿ ನ್ಯಾಯ ಒದಗಿಸುವಂತೆ ಕೋರಿದ್ದಾರೆ.