ಜೈಪುರ್: ನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಸೇವೆಯಿಂದ ವಜಾಗೊಂಡಿದ್ದ ರಾಜಸ್ಥಾನ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಭೂಪೇಂದ್ರ ಸಿಂಗ್ ಯಾದವ್‌ಗೆ ದೌಸಾ ಜಿಲ್ಲಾ ಪೋಕ್ಸೊ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಜೊತೆಗೆ 2 ಲಕ್ಷ ರೂ. ದಂಡ ವಿಧಿಸಲಾಗಿದ್ದು, ಆ ಮೊತ್ತವನ್ನು ಸಂತ್ರಸ್ತೆಗೆ ನೀಡಲು ಆದೇಶಿಸಲಾಗಿದೆ. ಅಲ್ಲದೇ, ಸಂತ್ರಸ್ತೆಗೆ 3 ಲಕ್ಷ ರೂ. ಪರಿಹಾರವನ್ನು ನೀಡುವಂತೆ ನ್ಯಾಯಾಲಯ ಶಿಫಾರಸು ಮಾಡಿದೆ.
ವರದಿಗಳ ಪ್ರಕಾರ, 2023ರಲ್ಲಿ ರಾಹುವಾಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿತ್ತು. ಚುನಾವಣಾ ಕರ್ತವ್ಯದಲ್ಲಿದ್ದ ವೇಳೆ ಸಬ್-ಇನ್ಸ್‌ಪೆಕ್ಟರ್ ಭೂಪೇಂದ್ರ ಸಿಂಗ್ ಯಾದವ್, ಕ್ಯಾಂಡಿ ಕೊಡುವುದಾಗಿ ಹೇಳಿ ನಾಲ್ಕು ವರ್ಷದ ಬಾಲಕಿಯನ್ನು ತನ್ನ ಕೊಠಡಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಈ ಪ್ರಕರಣ ರಾಜ್ಯಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.
ಸಂತ್ರಸ್ತೆ ಕುಟುಂಬದ ದೂರಿನ ಮೇರೆಗೆ ಪೊಲೀಸರು ತಕ್ಷಣವೇ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದರು. ನಂತರ ಪೊಲೀಸ್ ಇಲಾಖೆ ಕೂಡ ಅವನನ್ನು ಸೇವೆಯಿಂದ ವಜಾಗೊಳಿಸಿತು. ಪ್ರಕರಣದ ತನಿಖೆಯನ್ನು ವೇಗವಾಗಿ ಪೂರ್ಣಗೊಳಿಸಿ, ಪೋಕ್ಸೊ ಕಾಯ್ದೆಯಡಿಯಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಯಿತು.
ವಿಚಾರಣೆ ವೇಳೆ, ಸಂತ್ರಸ್ತೆ ಪರವಾಗಿ 33 ಸಾಕ್ಷಿಗಳು ಮತ್ತು 46 ದಾಖಲೆಗಳನ್ನು ನ್ಯಾಯಾಲಯದ ಮುಂದೆ ಮಂಡಿಸಲಾಯಿತು. ಸಾಕ್ಷ್ಯಾಧಾರಗಳು ಹಾಗೂ ಸಾಕ್ಷಿಗಳ ಹೇಳಿಕೆಗಳನ್ನು ಪರಿಗಣಿಸಿದ ನ್ಯಾಯಾಧೀಶೆ ರೇಖಾ ರಾಥೋಡ್, ಭೂಪೇಂದ್ರ ಸಿಂಗ್ ಯಾದವ್ ತಪ್ಪಿತಸ್ಥನೆಂದು ತೀರ್ಮಾನಿಸಿದರು.
ಶಿಕ್ಷೆ ಘೋಷಣೆಯ ನಂತರ, ಯಾದವ್ ತನ್ನನ್ನು ನಿರಪರಾಧಿ ಎಂದು ಹೇಳಿಕೊಂಡು, ಈ ತೀರ್ಪನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ತಿಳಿಸಿದ್ದಾರೆ. ಈ ಪ್ರಕರಣವನ್ನು ‘ಹೃದಯ ಕಲುಕುವ’ ಘಟನೆ ಎಂದು ವಿವರಿಸಿದ ವಿಶೇಷ ಸಾರ್ವಜನಿಕ ಅಭಿಯೋಜಕ ಜಿತೇಂದ್ರ ಕುಮಾರ್ ಸೈನಿ, ಪೊಲೀಸ್ ಅಧಿಕಾರಿಯೊಬ್ಬರಿಂದ ಪುಟ್ಟ ಬಾಲಕಿಯ ಮೇಲೆ ಇಂತಹ ಕೃತ್ಯ ನಡೆದಿರುವುದು ಅತ್ಯಂತ ಗಂಭೀರ ವಿಷಯವೆಂದು ಹೇಳಿದರು.