ಬೆಳಗಾವಿ: ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ 4,500 ಕೋಟಿ ರೂ. ವಂಚನೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿ ಆದೇಶಿಸಿದೆ. ಶಿವಂ ಅಸೋಸಿಯೇಟ್ಸ್ ಸಂಸ್ಥೆ ಮೂಲಕ ಸಾವಿರಾರು ಜನರಿಂದ ಹಣ ಸಂಗ್ರಹಿಸಿ ವಂಚನೆ ನಡೆಸಲಾಗಿದೆ ಎಂಬ ಆರೋಪದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.
ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಶಿವಾನಂದ್ ನೀಲಣ್ಣವರ್ ಅವರನ್ನು ಬಂಧಿಸಿದ ಬಳಿಕ ತನಿಖೆ ತೀವ್ರಗೊಂಡಿದೆ. ಮಾಜಿ ಸೈನಿಕರು ಸೇರಿದಂತೆ ಸಾರ್ವಜನಿಕರಿಂದ ಭಾರೀ ಪ್ರಮಾಣದಲ್ಲಿ ಹಣ ಸಂಗ್ರಹಿಸಲಾಗಿದ್ದು, ಯಾವುದೇ ನಿಯಮಗಳನ್ನು ಪಾಲಿಸದೇ ಹೆಚ್ಚಿನ ಬಡ್ಡಿ ನೀಡುವ ಆಮಿಷವೊಡ್ಡಲಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಮೂಲಗಳ ಪ್ರಕಾರ ಸುಮಾರು 40 ಸಾವಿರದಿಂದ 45 ಸಾವಿರ ಜನರು ಶಿವಂ ಅಸೋಸಿಯೇಟ್ಸ್‌ನಲ್ಲಿ ಒಟ್ಟು 4,500 ಕೋಟಿ ರೂ. ಹಣ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದೆ. ಹಣ ಸಂಗ್ರಹಣೆಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಾರ್ಗಸೂಚಿಗಳನ್ನು ಪಾಲಿಸಿಲ್ಲ ಎಂಬ ಆರೋಪವೂ ಎದುರಾಗಿದೆ.
ಗುರುವಾರ ಮಧ್ಯಾಹ್ನದಿಂದ ಶಿವಾನಂದ್ ನೀಲಣ್ಣವರ್ ಅವರಿಗೆ ಸೇರಿದ ಮನೆ, ಕಚೇರಿ ಹಾಗೂ ಅಪಾರ್ಟ್‌ಮೆಂಟ್‌ಗಳ ಮೇಲೆ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಹಲವು ಮಹತ್ವದ ದಾಖಲೆಗಳು ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಶೋಧ ಕಾರ್ಯದ ಬಳಿಕ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿತ್ತು.
ಇದಾದ ಬಳಿಕ ಮಾಳ ಮಾರುತಿ ಪೊಲೀಸ್ ಠಾಣೆಯಲ್ಲಿ ಶಿವಾನಂದ್ ನೀಲಣ್ಣವರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಠೇವಣಿದಾರರ ಹಣಕ್ಕೆ ಯಾವುದೇ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ಕಾಯ್ದೆಯಡಿ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶಿಸಿದ್ದರು.
ಇದರ ಬೆನ್ನಲ್ಲೇ ಎಸಿ ಶ್ರವಣ ಕುಮಾರ್ ನೇತೃತ್ವದಲ್ಲಿ ಸಹಕಾರ ಇಲಾಖೆಯ ಅಧಿಕಾರಿಗಳು ಸ್ಥಳೀಯ ಪೊಲೀಸರ ಸಹಾಯದೊಂದಿಗೆ ದಾಳಿ ನಡೆಸಿದ್ದರು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಇದೀಗ ಸರ್ಕಾರ ಅಧಿಕೃತವಾಗಿ ತನಿಖೆಯನ್ನು ಸಿಐಡಿಗೆ ವಹಿಸಿದೆ.
ಸಾವಿರಾರು ಜನರ ಹಣ ಹೂಡಿಕೆ ಮತ್ತು ಭಾರೀ ಮೊತ್ತದ ವಹಿವಾಟು ಇರುವುದರಿಂದ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ.