ಹುಬ್ಬಳ್ಳಿ, ಜ.24: ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಬೇಕಿದ್ದ ಮನೆ ಹಸ್ತಾಂತರ ಕಾರ್ಯಕ್ರಮ ಆರಂಭವಾಗುವ ಮುನ್ನವೇ ವೇದಿಕೆ ಮುಂಭಾಗ ಅಳವಡಿಸಿದ್ದ ಬೃಹತ್ ಕಟೌಟ್‌ಗಳು ಏಕಾಏಕಿ ಕುಸಿದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಹುಬ್ಬಳ್ಳಿಯಲ್ಲಿ ಇಂದು ನಡೆದಿದೆ.
ನಗರದ ಮಂಟೂರು ರಸ್ತೆಯಲ್ಲಿ ಕರ್ನಾಟಕ ಸ್ಲಂ ಬೋರ್ಡ್ ವತಿಯಿಂದ ನಿರ್ಮಾಣಗೊಂಡಿರುವ 42,345 ಮನೆಗಳ ಹಂಚಿಕೆ ಕಾರ್ಯಕ್ರಮ ಇಂದು ನಡೆಯಬೇಕಿತ್ತು. ಈ ಹಿನ್ನೆಲೆಯಲ್ಲಿ ವೇದಿಕೆ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರ ಬೃಹತ್ ಕಟೌಟ್‌ಗಳನ್ನು ಅಳವಡಿಸಲಾಗಿತ್ತು.
ಕಟೌಟ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡದೇ ಅಳವಡಿಸಿದ್ದರಿಂದ ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಅವುಗಳು ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಖಾಸಗಿ ಆಸ್ಪತ್ರೆ ಹಾಗೂ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯ ನಂತರ ಕುಸಿದು ಬಿದ್ದ ಕಟೌಟ್‌ಗಳನ್ನು ಸ್ಥಳದಿಂದ ತೆರವುಗೊಳಿಸಲಾಗಿದೆ.
ಗಾಯಾಳುಗಳ ಆರೋಗ್ಯ ವಿಚಾರಿಸಿದ ಅಧಿಕಾರಿಗಳು:
ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಸತೀಶ್ ಹೋನಕೇರಿ ಅವರೂ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಚಿಕಿತ್ಸೆ ಕುರಿತು ಮಾಹಿತಿ ಪಡೆದುಕೊಂಡರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ, ಗಾಯಾಳುಗಳಲ್ಲಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಆರೋಗ್ಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸ್ಪಷ್ಟಪಡಿಸಿದರು.