ಬೆಂಗಳೂರು: ರೈಲ್ವೆ ಇಲಾಖೆಯ (Railway Department) ನೇಮಕಾತಿ ಹಾಗೂ ಬಡ್ತಿ ಪರೀಕ್ಷೆಗಳನ್ನು ಕನ್ನಡದಲ್ಲೂ (Kannada) ನಡೆಸುವಂತೆ ಒತ್ತಾಯಿಸಿ ಜೆಡಿಎಸ್ (JDS) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ಈ ಕುರಿತ ಮಾಹಿತಿಯನ್ನು ತಮ್ಮ ಎಕ್ಸ್ ಖಾತೆಯಲ್ಲೂ ಹಂಚಿಕೊಂಡಿದ್ದಾರೆ.
ನೈರುತ್ಯ ರೈಲ್ವೆ ಇಲಾಖೆಯಲ್ಲಿ ನಡೆಯುತ್ತಿರುವ ಇಲಾಖಾ ಪರೀಕ್ಷೆಗಳು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ನಡೆಯುತ್ತಿರುವುದು ಕನ್ನಡಿಗ ಉದ್ಯೋಗಿಗಳಿಗೆ ಅನ್ಯಾಯವಾಗುತ್ತಿದೆ ಎಂದು ನಿಖಿಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕನ್ನಡಿಗರಿಗೆ ಸಮಾನ ಅವಕಾಶ ದೊರಕಬೇಕಾದರೆ ಪರೀಕ್ಷೆಗಳು ಕನ್ನಡದಲ್ಲೂ ನಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಈ ಸಂಬಂಧ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಆಗಸ್ಟ್ 2024ರಲ್ಲಿ ರೈಲ್ವೆ ಮಂಡಳಿ ಹೊರಡಿಸಿದ್ದ ಆದೇಶದ ಅನ್ವಯ ಕನ್ನಡದಲ್ಲೂ ಪರೀಕ್ಷೆ ನಡೆಸುವಂತೆ ಮನವಿ ಮಾಡಿದ್ದೇನೆ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ರೈಲ್ವೆ ಇಲಾಖೆಯ ಎಲ್ಲಾ ಪರೀಕ್ಷೆಗಳಲ್ಲೂ ಕನ್ನಡಕ್ಕೆ ಆದ್ಯತೆ ಸಿಗುವಂತೆ ಹೋರಾಟ ಮುಂದುವರಿಸುತ್ತೇನೆ ಎಂದು ನಿಖಿಲ್ ಹೇಳಿದ್ದಾರೆ.