ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೆನ್ನಿಪೇಟೆಯಲ್ಲಿರುವ ಶಿವಣಗಿ ಕಾಂಪ್ಲೆಕ್ಸ್ ಹಿಂಭಾಗ ಹಾಗೂ ಜಿ-ಮಾರ್ಟ್ ಎದುರು ನಿರ್ಮಾಣವಾಗುತ್ತಿದ್ದ ಸಾರ್ವಜನಿಕ ಶೌಚಾಲಯ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಇಡೀ ಪ್ರದೇಶ ಗಬ್ಬು ನಾರುತ್ತಿದೆ. ಇದರಿಂದ ಸ್ಥಳೀಯ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ತೀವ್ರ ಪರದಾಡುವಂತಾಗಿದೆ.
ಶೌಚಾಲಯದ ಕಾಮಗಾರಿ ಅಪೂರ್ಣಗೊಂಡಿರುವುದರಿಂದ, ಜನರು ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಇದರಿಂದಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ದುರ್ವಾಸನೆ ಹಾಗೂ ಅಸ್ವಚ್ಛತೆಯಿಂದಾಗಿ ಸ್ಥಳೀಯರಲ್ಲಿ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ವ್ಯಾಪಾರಸ್ಥರು ಹಾಗೂ ದಾರಿಹೋಕರು ಪ್ರತಿದಿನ ಆತಂಕದಲ್ಲಿಯೇ ಕಾಲ ಕಳೆಯುವಂತಾಗಿದೆ.
ಅಧಿಕಾರಿಗಳ ನಿರ್ಲಕ್ಷ್ಯ, ಅಣಕಿಸುತ್ತಿರುವ 'ಸ್ವಚ್ಛ ಭಾರತ': ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 'ಸ್ವಚ್ಛ ಭಾರತ' ಅಭಿಯಾನದಡಿ ನೈರ್ಮಲ್ಯಕ್ಕಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದ್ದರೂ, ಇಲ್ಲಿನ ಆಡಳಿತ ಮಾತ್ರ ಕಣ್ಮುಚ್ಚಿ ಕುಳಿತಿದೆ. ಸಂಬಂಧಪಟ್ಟ ಪುರಸಭೆ ಹಾಗೂ ಇಲಾಖಾಧಿಕಾರಿಗಳು ಈ ಬಗ್ಗೆ ಕಿಂಚಿತ್ತೂ ತಲೆಕೆಡಿಸಿಕೊಂಡಿಲ್ಲ. "ಹೇಳುವವರಿಲ್ಲ, ಕೇಳುವವರಿಲ್ಲ" ಎಂಬಂತೆ ಅಧಿಕಾರಿಗಳು ಜಾಣಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನಾದರೂ ಸಂಬಂಧಪಟ್ಟ ಪುರಸಭೆ, ತಾಲೂಕು ಆಡಳಿತ, ಜಿಲ್ಲಾಡಳಿತ, ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಶಾಸಕರು ಎಚ್ಚೆತ್ತುಕೊಳ್ಳುತ್ತಾರೆಯೇ? ಅಪೂರ್ಣಗೊಂಡಿರುವ ಶೌಚಾಲಯ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುತ್ತಾರೆಯೇ ಅಥವಾ ಇದೇ ಯಥಾಸ್ಥಿತಿ ಮುಂದುವರಿಯಲು ಬಿಡುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.
- ವರದಿ: ಮಹೇಶ್ ಶರ್ಮಾ