ಬೆಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ತರಗತಿ ನಡೆಯುತ್ತಿದ್ದ ಸಮಯದಲ್ಲೇ ಶಾಲಾ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಕೆಂಗೇರಿ ಸಮೀಪದ ನಾಗದೇವನಹಳ್ಳಿಯ ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ನಡೆದಿದೆ. ಶಾಲೆಯ 3 ಹಾಗೂ 4ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಶಿಕ್ಷಕರು ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಕೆಂಗೇರಿ ಪೊಲೀಸರು ದೌಡಾಯಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದರು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆ ಹೇಗೆ ನಡೆದಿದೆ?
ಸುಮಾರು 2 ಸಾವಿರ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಈ ಶಾಲೆಯಲ್ಲಿ ಇಂದು ಬೆಳಗ್ಗೆ ಎಂದಿನಂತೆ 9 ಗಂಟೆಗೆ ತರಗತಿಗಳು ಆರಂಭವಾಗಿದ್ದವು. ಬೆಳಗ್ಗೆ 10:15ರ ಸುಮಾರಿಗೆ 4ನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ 3ನೇ ಮಹಡಿಗೂ ವ್ಯಾಪಿಸಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಶಾಲಾ ಸಿಬ್ಬಂದಿ ಕೂಡಲೇ ಮಕ್ಕಳನ್ನು ಹೊರಗೆ ಸ್ಥಳಾಂತರಿಸಿದ್ದಾರೆ. ನಾಲ್ಕು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇದೇ ವೇಳೆ ಶಾಲೆಯಲ್ಲಿ 50ಕ್ಕೂ ಹೆಚ್ಚು ಮಕ್ಕಳ ಪೋಷಕರ ಸಭೆ ನಡೆಯುತ್ತಿದ್ದು, ಘಟನೆ ತಿಳಿಯುತ್ತಿದ್ದಂತೆ ನೂರಾರು ಪೋಷಕರು ಆತಂಕದಿಂದ ಶಾಲೆಯತ್ತ ಧಾವಿಸಿ ಗೇಟ್ ಬಳಿ ಜಮಾಯಿಸಿದ್ದರು.