ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯ (FRRO) ನಿರ್ದೇಶನದಂತೆ ಗಡೀಪಾರು ಪ್ರಕ್ರಿಯೆಗಾಗಿ ಪಶ್ಚಿಮ ಬಂಗಾಳಕ್ಕೆ ಕಳುಹಿಸಿಕೊಡಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆಸಲಾದ ವಿಶೇಷ ಕಾರ್ಯಾಚರಣೆಯಲ್ಲಿ ಈ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿತ್ತು.
ನಗರದ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ರೈಲು ನಿಲ್ದಾಣದಿಂದ ಹೊರಟ ರೈಲಿನಲ್ಲಿ ಇವರಿಗಾಗಿ ವಿಶೇಷ ಬೋಗಿಯ ವ್ಯವಸ್ಥೆ ಮಾಡಲಾಗಿದೆ. ಈ ತಂಡಕ್ಕೆ 20 ಪೊಲೀಸ್ ಸಿಬ್ಬಂದಿಯ ಭದ್ರತಾ ಬೆಂಗಾವಲು ನೀಡಲಾಗಿದ್ದು, ಮಂಗಳವಾರ ಸಂಜೆ ವೇಳೆಗೆ ಪಶ್ಚಿಮ ಬಂಗಾಳದ ಮಾಲ್ಡಾ ನಿಲ್ದಾಣಕ್ಕೆ ತಲುಪುವ ನಿರೀಕ್ಷೆಯಿದೆ. ಅಲ್ಲಿ ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ, ಗಡಿ ಭದ್ರತಾ ಪಡೆ (BSF) ಮೂಲಕ ಅವರನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರಿಸಲಾಗುವುದು ಎಂದು ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ಎಂ. ನಾರಾಯಣ್ ಮಾಹಿತಿ ನೀಡಿದ್ದಾರೆ.
ಆಗಸ್ಟ್ 9ರಂದು ಬೆಂಗಳೂರು ಪೊಲೀಸರು ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲು 'ಆಪರೇಷನ್ ಮುಕ್ತ' ಎಂಬ ಬೃಹತ್ ಕಾರ್ಯಾಚರಣೆ ನಡೆಸಿದ್ದರು. ಮುಖ್ಯವಾಗಿ ವೈಟ್‌ಫೀಲ್ಡ್ ಹಾಗೂ ಎಲೆಕ್ಟ್ರಾನಿಕ್ ಸಿಟಿ ವಿಭಾಗಗಳಲ್ಲಿ ಕೈಗೊಂಡ ಈ ಕಾರ್ಯಾಚರಣೆಯಲ್ಲಿ ಒಟ್ಟು 2,944 ಶಂಕಿತ ವ್ಯಕ್ತಿಗಳ ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಲಾಗಿತ್ತು. ಈ ಪೈಕಿ 105 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳು ಪತ್ತೆಯಾಗಿದ್ದರು.
ಎಲೆಕ್ಟ್ರಾನಿಕ್ ಸಿಟಿ ವಿಭಾಗ ಒಂದರಲ್ಲೇ ರಚಿಸಲಾಗಿದ್ದ 23 ವಿಶೇಷ ತಂಡಗಳು 1,909 ಜನರನ್ನು ತಪಾಸಣೆಗೊಳಪಡಿಸಿ, 43 ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆದಿದ್ದವು. ಇವರ ಸಂಪೂರ್ಣ ವಿವರ ಹಾಗೂ ವರದಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ ಸಲ್ಲಿಸಲಾಗಿತ್ತು. ಪ್ರಸ್ತುತ ಎಫ್‌ಆರ್‌ಆರ್‌ಒ ಸೂಚನೆ ಹಾಗೂ ಮಾರ್ಗದರ್ಶನದಂತೆ ಪ್ರಥಮ ಹಂತದಲ್ಲಿ 31 ಜನರನ್ನು ಸ್ವದೇಶಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ.