ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ಇಂದು ಅಂತಿಮ ಘಟ್ಟಕ್ಕೆ ಬಂದಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಚಿವ ಸತೀಶ್ ಜಾರಕಿಹೊಳಿ ದೆಹಲಿಗೆ ದೌಡಾಯಿಸಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಗೆ ಮುಹೂರ್ತ ಫಿಕ್ಸ್ ಆಗಿದೆ. ಎಲ್ಲಾ ಗೊಂದಲಗಳಿಗೆ, ನಾಯಕರ ಹೇಳಿಕೆಗಳಿಗೆ ತೆರೆ ಬೀಳಲಿದೆ ಎಂದು ಹೇಳಿದ್ದ ಸಚಿವ ಸತೀಶ್ ಜಾರಕಿಹೊಳಿ, ತಾವು ದೆಹಲಿಗೆ ಹೋಗುತ್ತಿಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಮಾಹಿತಿ ಇಲ್ಲ ಆದರೆ ನಮ್ಮ ಸಾಮರ್ಥ್ಯಗಳನ್ನು ಮೂರ್ನಾಲ್ಕು ಚುನಾವಣೆಗಳಲ್ಲಿ ತೋರಿಸಿದ್ದೇವೆ. ನಾವಾಗಿಯೇ ಯಾವುದೇ ಹುದ್ದೆ ಕೇಳುವುದಿಲ್ಲ. ಯಾರು ಸಮರ್ಥರು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಸತೀಶ್ ಜಾರಕಿಹೊಳಿ ಕೂಡ ದೆಹಲಿಗೆ ಪ್ರಯಾಣಿಸಿರುವುದು ಕುತೂಹಲ ಮೂಡಿಸಿದೆ.
ಮುಖ್ಯಮಂತ್ರಿ ಸ್ಥಾನ ಬದಲಾವಣೆ ಚರ್ಚೆ ನಡೆಯುತ್ತಿರುವಂತೆಯೇ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ತೀವ್ರ ಪೈಪೋಟಿ ಪ್ರಾರಂಭವಾಗಿದೆ. ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದು, ದೆಹಲಿಗೆ ತೆರಳಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹೈಕಮಾಂಡ್ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ಈಗಾಗಲೇ ದೆಹಲಿಯಲ್ಲಿದ್ದಾರೆ. ಇದರ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಅವರ ಭೇಟಿ ಕೂಡ ಮಹತ್ವ ಪಡೆದಿದೆ.
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದರೆ, ಸತೀಶ್ ಜಾರಕಿಹೊಳಿ ಅವರು ಪ್ರತ್ಯೇಕವಾಗಿ ದೆಹಲಿಗೆ ತೆರಳಿದ್ದಾರೆ. ತಮ್ಮದೇ ಆದ ತಂತ್ರಗಾರಿಕೆ ನಡೆಸುತ್ತಿದ್ದಾರೆ. ಇದೇ ವೇಳೆ, ಸಚಿವ ಪ್ರಿಯಾಂಕ್ ಖರ್ಗೆ ಕೂಡ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಹೈಕಮಾಂಡ್ ಇನ್ನೂ ತಮ್ಮೊಂದಿಗೆ ಚರ್ಚಿಸಿಲ್ಲ ಎಂದು ಜಾರಕಿಹೊಳಿ ಹೇಳಿದ್ದು, ಸಭೆಯಲ್ಲಿ ಅಜೆಂಡಾ ಆಧರಿಸಿ ನಿರ್ಧಾರವಾಗಲಿದೆ ಎಂದು ತಿಳಿಸಿದ್ದಾರೆ.