ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಾದಕವಸ್ತುಗಳ ಜಾಲ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಲೇಜು ವಿದ್ಯಾರ್ಥಿಗಳೇ ಮಾದಕ ವಸ್ತು ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ. ಟಾರ್ಗೆಟ್ ಚೆನ್ನೈನಿಂದ ಮಂಗಳೂರಿಗೆ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ವಿದ್ಯಾರ್ಥಿನಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನಿವಾಸಿ ಸುಹಾನ (21) ಎಂದು ಗುರುತಿಸಲಾಗಿದೆ. ಈಕೆ ಕುಂದಾಪುರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ಓದುತ್ತಿದ್ದಳು.
ಮೇ 12ರಂದು ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿ ವಿದ್ಯಾರ್ಥಿನಿಯನ್ನು ಬಂಧಿಸಿದ್ದಾರೆ.
ಬಂಧಿತ ವಿದ್ಯಾರ್ಥಿನಿಯಿಂದ ಸುಮಾರು 35 ಲಕ್ಷ ರೂ. ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೋವಿಡ್ ಗಾಂಜಾ ಎಂಬ ಅತೀ ದುಬಾರಿ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್ ಮತ್ತು ಇತರ ದಾಖಲೆಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಸುಹಾನ ಈ ಮಾದಕ ವಸ್ತುವನ್ನು ಚೆನ್ನೈನಿಂದ ಮಂಗಳೂರಿಗೆ ತರಿಸಿಕೊಂಡಿದ್ದಳು. ಇಲ್ಲಿನ ಕಾಲೇಜು ವಿದ್ಯಾರ್ಥಿಗಳು ಹಾಗೂ ಶ್ರೀಮಂತ ಗ್ರಾಹಕರಿಗೆ ಇದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಗಳಿಸುವ ಸಂಚು ರೂಪಿಸಿದ್ದಳು ಎನ್ನಲಾಗಿದೆ.
ಕೇವಲ 21 ವರ್ಷದ ಸುಹಾನಾ ಈಗಾಗಲೇ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ. ಈಕೆಯ ಮೇಲೆ ಈ ಹಿಂದೆ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಲ್ಲದೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆಯಲ್ಲೂ ಈಕೆಯ ವಿರುದ್ಧ ಮಾದಕ ದ್ರವ್ಯ ಸಾಗಾಟದ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ.
ಪ್ರಸ್ತುತ ವಿದ್ಯಾರ್ಥಿನಿ ಸುಹಾನಾ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಜಾಲದ ಹಿಂದೆ ಇರುವ ಇನ್ನಷ್ಟು ಆರೋಪಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಪೊಲೀಸರು ಬಲೆ ಬೀಸಿದ್ದಾರೆ.