ಬೆಂಗಳೂರು/ಕೊಪ್ಪಳ: ನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಲು ಕೊಪ್ಪಳದ ಗವಿಮಠದ ಪರಮಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಇಂದು ಶ್ರೀಗಳನ್ನು ಖುದ್ದಾಗಿ ಭೇಟಿ ಮಾಡಿ ಸರ್ಕಾರದ ಪರವಾಗಿ ಆಹ್ವಾನ ಪತ್ರಿಕೆ ಸಲ್ಲಿಸಿದರು.
ಸಂಸ್ಕೃತಿ, ಪರಂಪರೆ ಹಾಗೂ ಆಧ್ಯಾತ್ಮಿಕ ಮೌಲ್ಯಗಳ ಪ್ರತೀಕವಾಗಿರುವ ಪೂಜ್ಯ ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ಈ ಬಾರಿಯ ಮೈಸೂರು ದಸರಾ ಉದ್ಘಾಟನೆಗೊಳ್ಳುತ್ತಿರುವುದು ಸಮಸ್ತ ಕನ್ನಡಿಗರಿಗೂ ಹೆಮ್ಮೆಯ ಸಂಗತಿಯಾಗಿದೆ.
ಆಹ್ವಾನ ನೀಡುವ ಸಂದರ್ಭದಲ್ಲಿ ಸಂಸದ ರಾಜಶೇಖರ್ ಹಿಟ್ನಾಳ್, ಶಾಸಕ ರಾಘವೇಂದ್ರ ಹಿಟ್ನಾಳ್, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ ಹಾಗೂ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಐತಿಹಾಸಿಕ ಹಾಗೂ ಜಗತ್ಪ್ರಸಿದ್ಧ ಮೈಸೂರು ದಸರಾ ಸಾಂಸ್ಕೃತಿಕ ವೈಭವವನ್ನು ಕಣ್ತುಂಬಿಕೊಳ್ಳಲು ನಾಡಿನ ಸಮಸ್ತ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
https://twitter.com/cmofkarnataka/status/2104482862896755056