ಮೈಸೂರು : ಮೈಸೂರಿನ ಪ್ರಸಿದ್ಧ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಕಸದ ರಾಶಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯಿಂದ ಆವರಣದಲ್ಲಿ ಆವರಿಸಿದ ದಟ್ಟ ಹೊಗೆಯಿಂದ ಸಾರ್ವಜನಿಕರು ಹಾಗೂ ಸ್ಥಳೀಯರು ಕೆಲಕಾಲ ಆತಂಕಕ್ಕೀಡಾದ ಘಟನೆ ವರದಿಯಾಗಿದೆ. ಪ್ರಾಧಿಕಾರದ ಆವರಣದಲ್ಲಿ ಸಂಗ್ರಹವಾಗಿದ್ದ ಒಣ ಕಸ ಹಾಗೂ ಗಿಡಗಂಟಿಗಳಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿಯ ತೀವ್ರತೆಗೆ ಆಕಾಶಕ್ಕೆ ಮುಟ್ಟುವಷ್ಟು ದಟ್ಟವಾದ ಹೊಗೆ ಆವರಿಸಿಕೊಂಡಿದ್ದರಿಂದ ಸುತ್ತಮುತ್ತಲಿನ ಸಂಚಾರ ಹಾಗೂ ಸಾರ್ವಜನಿಕರಲ್ಲಿ ಭೀತಿ ಮೂಡಿಸಿತ್ತು.
ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ಧಾವಿಸಿ ಬಂದು ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾದರು. ಸಕಾಲದಲ್ಲಿ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ಹಾಗೂ ದೊಡ್ಡ ಮಟ್ಟದ ಹಾನಿ ತಪ್ಪಿದಂತಾಗಿದೆ. ಈ ಘಟನೆಯ ಕುರಿತು ಸ್ಥಳೀಯ ಆಡಳಿತ ಹಾಗೂ ಸಂಬಂಧಪಟ್ಟ ಇಲಾಖೆಯು ಸೂಕ್ತ ತನಿಖೆ ನಡೆಸಿ, ಪ್ರಾಧಿಕಾರದ ಆವರಣದಲ್ಲಿ ಕಸ ವಿಲೇವಾರಿ ಮತ್ತು ಭದ್ರತೆಯ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.