ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿರುವ ಹಳೆ ಪಿಂಚಣಿ ಯೋಜನೆ (OPS) ಜಾರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಸರ್ಕಾರದ ಮಟ್ಟದಲ್ಲಿ ಓಪಿಎಸ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ನೌಕರರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ. ರಾಜ್ಯದಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಾತ್ವಿಕವಾಗಿ ಒಪ್ಪಿಗೆ ಸೂಚಿಸಿದ್ದು, ಮುಂಬರುವ ದಿನಗಳಲ್ಲಿ ಇದನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ಡಿಸಿಎಂ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದ ಶೃಂಗಾರ್ ಪ್ಯಾಲೆಸ್‌ನಲ್ಲಿ 'ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ, ಎಸ್‌ಟಿ ನೌಕರರ ಸಮನ್ವಯ ಸಮಿತಿ' ಆಯೋಜಿಸಿದ್ದ 6ನೇ 'ರಾಜ್ಯಮಟ್ಟದ ಐಕ್ಯತಾ ಸಮಾವೇಶ' ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಇದೇ ವೇಳೆ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಕುರಿತು ಪ್ರಸ್ತಾಪಿಸಿದ ಅವರು, ಸದ್ಯ ಖಾಲಿ ಇರುವ 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ. ಇದರೊಂದಿಗೆ ಬಾಕಿ ಉಳಿದಿರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಸರ್ಕಾರದ ಹಂತದಲ್ಲಿ ಗಂಭೀರ ಚರ್ಚೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.
ಹಿಂದೆ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸುದೀರ್ಘ ಹೋರಾಟದ ಫಲವಾಗಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲಾಗಿತ್ತು. ಅದೇ ಮಾದರಿಯಲ್ಲಿ ಈಗಿನ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿ ಶೀಘ್ರದಲ್ಲೇ ಬ್ಯಾಕ್‌ಲಾಗ್ ಹುದ್ದೆಗಳನ್ನೂ ಭರ್ತಿ ಮಾಡಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಸಮನ್ವಯ ಸಮಿತಿಗೆ ಸೂಕ್ತ ಜಾಗ ಮಂಜೂರು ಮಾಡುವಂತೆ ಕೋರಲಾದ ಮನವಿಗೆ ಸ್ಪಂದಿಸಿದ ಅವರು, ಜಾಗ ಗುರುತಿಸಿ ನೀಡಿದರೆ ಸಚಿವ ಕೆ.ಹೆಚ್. ಮುನಿಯಪ್ಪ ಅವರೊಂದಿಗೆ ಚರ್ಚಿಸಿ ಜಾಗವನ್ನು ಮಂಜೂರು ಮಾಡಿಸಿಕೊಡುವುದಾಗಿ ತಿಳಿಸಿದರು.
ಸಮಾವೇಶದಲ್ಲಿ ಭಾಗವಹಿಸಿದ್ದ ನೌಕರರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಎಸ್‌ಸಿ ಮತ್ತು ಎಸ್‌ಟಿ ಸಮುದಾಯದಲ್ಲಿ ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿದ್ದರೂ ನಿಮ್ಮ ಬೇಡಿಕೆ ಹಾಗೂ ಸಮಸ್ಯೆಗಳು ಸೂಕ್ತ ರೀತಿಯಲ್ಲಿ ಮುಖ್ಯಮಂತ್ರಿ ತಲುಪುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನಿರ್ಧಾರಗಳನ್ನು ತೆಗೆದುಕೊಳ್ಳುವ ಶಕ್ತಿ ಕೇಂದ್ರಗಳಿಗೆ ನಿಮ್ಮ ಧ್ವನಿ ತಲುಪಬೇಕಾದರೆ ಸಂಘಟನೆ ಮತ್ತಷ್ಟು ಗಟ್ಟಿಯಾಗಬೇಕು. ನೌಕರರೆಲ್ಲರೂ ಒಟ್ಟಾಗಿ ಶಕ್ತಿ ಪ್ರದರ್ಶಿಸಿದಾಗ ಮಾತ್ರ ಇಂತಹ ಐಕ್ಯತಾ ಸಮಾವೇಶಗಳಿಗೆ ನೈಜ ಅರ್ಥ ಬರುತ್ತದೆ ಎಂದು ಕಿವಿಮಾತು ಹೇಳಿದರು.
https://twitter.com/i/status/2093306253732888965