ಬೆಂಗಳೂರು: ಬಿಸಿಲ ಧಗೆ, ತಾಪಮಾನ ಹೆಚ್ಚಳವಾಗುತ್ತಿದ್ದಂತೆ ಬೆಂಕಿ ಅವಘಡ ಪ್ರಕರಣಗಳು ಹೆಚ್ಚುತ್ತಿವೆ. ರಾಜ್ಯ ರಾಜಧಾನಿ ಬೆಂಗಳೂರಿನ ಹೃದಯಭಾಗದಲ್ಲಿರುವ ಕೆ.ಆರ್. ಮಾರ್ಕೆಟ್ ಬಳಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.
ಕೆ.ಆರ್. ಮಾರ್ಕೆಟ್ ಬಳಿಯ ಕಸದ ರಾಶಿಗೆ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆ ಸುತ್ತ ಮುತ್ತಲ ಪ್ರದೇಶಕ್ಕೂ ವ್ಯಾಪಿಸಿದೆ. ಈ ಘಟನೆಯು ಸ್ಥಳೀಯರಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿಸಿದೆ. ನೋಡ ನೋಡುತ್ತಿದ್ದಂತೆಯೇ ಕಸದ ರಾಶಿ ಸಂಪೂರ್ಣವಾಗಿ ಸುಟ್ಟು ಬೂದಿ ಮಾಡಿದೆ.
ಅಗ್ನಿ ಅವಘಡದಿಂದಾಗಿ ಕೆ.ಆರ್.ಮಾರ್ಕೆಟ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡಿದೆ. ಸ್ಥಳದಲ್ಲಿ ಉಸಿರಾಟದ ಸಮಸ್ಯೆಯನ್ನುಂಟಾಗುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

