ಬೀದರ್‌ನ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆದ 45 ಕೋಟಿ ರೂ.ಗಳ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ, ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಸೇರಿದಂತೆ ಆರು ಜನರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಮಾಜಿ ಉಪಕುಲಪತಿ ಪ್ರೊ. ಹೆಚ್.ಡಿ. ನಾರಾಯಣಸ್ವಾಮಿ, 2017-18ರ ಅವಧಿಯ ಹಣಕಾಸು ನಿಯಂತ್ರಣಾಧಿಕಾರಿ ಕೆ.ಎಲ್. ಸುರೇಶ್, ಹಾಗೂ ಇತರರಾದ ಮೃತ್ಯುಂಜಯ ಹಿರೇಮಠ, ಬೊಪಣ್ಣ, ಮಂಜುನಾಥ ಮತ್ತು ರಾಮಗೊಂಡ ಅವರನ್ನು ಬಂಧಿಸಲಾಗಿದೆ.
ಹಗರಣದ ವಿವರ: 2017-18ರ ಅವಧಿಯಲ್ಲಿ ವಿಶ್ವವಿದ್ಯಾಲಯಕ್ಕೆ ಸಾಮಗ್ರಿಗಳನ್ನು ಖರೀದಿಸುವ ಹೆಸರಿನಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ, 45 ಕೋಟಿ ರೂ.ಗೂ ಅಧಿಕ ಸಾರ್ವಜನಿಕ ಹಣವನ್ನು ಲೂಟಿ ಮಾಡಲಾಗಿತ್ತು. ಯಾವುದೇ ಸಾಮಗ್ರಿಗಳನ್ನು ಖರೀದಿಸದಿದ್ದರೂ ನಕಲಿ ದಾಖಲೆಗಳನ್ನು ಸೃಷ್ಟಿಸಿ ಹಣ ವರ್ಗಾವಣೆ ಮಾಡಲಾಗಿತ್ತು.2021ರಲ್ಲಿ ಲೋಕಾಯುಕ್ತ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದರು. 2025ರ ಸೆಪ್ಟೆಂಬರ್‌ನಲ್ಲಿ ರಾಜ್ಯದಾದ್ಯಂತ 25ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು.ಬೀದರ್ ಜಿಲ್ಲಾ ಸತ್ರ ನ್ಯಾಯಾಲಯ ವಾರೆಂಟ್ ಹೊರಡಿಸಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಆರೋಪಿಗಳನ್ನು ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಪ್ರಕ್ರಿಯೆ ನಡೆಯುತ್ತಿದೆ.