ದೆಹಲಿಯ ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಘಟಿಸಿದ್ದ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಆಮ್ ಆದ್ಮಿ ಪಾರ್ಟಿಯ (ಎಎಪಿ) ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆಯಲ್ಲಿ ಭಾಗವಹಿಸಲು ಬೆಂಬಲಿಗರಿಗೆ 'ದಿಲ್ಲಿ ಚಲೋ' ಕರೆ ನೀಡಿದ ಬೆನ್ನಲ್ಲೇ ಕೇಜ್ರಿವಾಲ್ ಅವರನ್ನು ಲೋಧಿ ಎಸ್ಟೇಟ್ ಬಳಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕೇಜ್ರಿವಾಲ್ ಅವರಲ್ಲದೆ, ಎಎಪಿಯ ರಾಜ್ಯಸಭಾ ಸಂಸದ ಸಂಜಯ್ ಸಿಂಗ್, ಸೌರಭ್ ಭಾರದ್ವಾಜ್ ಮತ್ತು ದುರ್ಗೇಶ್ ಪಾಠಕ್ ಸೇರಿದಂತೆ ಹಲವು ಹಿರಿಯ ನಾಯಕರನ್ನೂ ಸಹ ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯಲ್ಲಿ (SIR) ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ದೆಹಲಿಯಲ್ಲಿ ಭದ್ರತೆಯನ್ನು ತೀವ್ರಗೊಳಿಸಿರುವ ಪೊಲೀಸರು ಜಂತರ್ ಮಂತರ್ ಕಡೆಗೆ ತೆರಳುತ್ತಿದ್ದ ನೂರಾರು ಪ್ರತಿಭಟನಾಕಾರರು ಮತ್ತು ವಿಪಕ್ಷ ನಾಯಕರನ್ನು ನಗರದಾದ್ಯಂತ ವಶಕ್ಕೆ ಪಡೆಯುತ್ತಿದ್ದಾರೆ. ಈ ಕ್ರಮವನ್ನು ಖಂಡಿಸಿರುವ ಆಮ್ ಆದ್ಮಿ ಪಾರ್ಟಿ, ಇದು ಪ್ರಜಾಪ್ರಭುತ್ವ ಮತ್ತು ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸುವ ಪ್ರಯತ್ನ ಎಂದು ಆಕ್ರೋಶ ವ್ಯಕ್ತಪಡಿಸಿದೆ