ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ನಾಪತ್ತೆಯಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕೊನೆಗೂ ಸಿಐಡಿ (CID) ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಳಿಸಿರುವ ಸಿಐಡಿ ಅಧಿಕಾರಿಗಳು, ನಿನ್ನೆ ರಾತ್ರಿ ಸುಮಾರು 11 ಗಂಟೆಯವರೆಗೆ ಸತತವಾಗಿ ಇವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದಾರೆ.
ನಿನ್ನೆ ತಡರಾತ್ರಿಯವರೆಗೆ ಸುದೀರ್ಘ ವಿಚಾರಣೆ ನಡೆಸಿದ್ದರೂ ತನಿಖೆ ಇಷ್ಟಕ್ಕೇ ಮುಗಿದಿಲ್ಲ. ಪ್ರಕರಣದ ಮೂಲ ಜಾಲವನ್ನು ಭೇದಿಸಲು ಹಾಗೂ ಇನ್ನಷ್ಟು ಸ್ಪಷ್ಟನೆ ಪಡೆಯಲು ಸಿಐಡಿ ಅಧಿಕಾರಿಗಳು ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರಿಗೆ ಇಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಎರಡನೇ ನೋಟಿಸ್ ಜಾರಿ ಮಾಡಿದ್ದಾರೆ. ಇಂದು ನಡೆಯುವ ವಿಚಾರಣೆ ಈ ಹಗರಣದ ಮುಂದಿನ ಹಂತದ ತನಿಖೆಗೆ ಅತ್ಯಂತ ನಿರ್ಣಾಯಕವಾಗುವ ಸಾಧ್ಯತೆಯಿದೆ.