ರಾಯಚೂರು: ವಸತಿ ಗೃಹವೊಂದರ ಮೇಲೆ ಪೊಲೀಸರು ಅನಿರೀಕ್ಷಿತ ದಾಳಿ ನಡೆಸಿ, ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಪತ್ತೆಹಚ್ಚಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ಮಹಿಳೆಯನ್ನು ರಕ್ಷಿಸಲಾಗಿದೆ.
ನಗರದ ಹೊರವಲಯದ ನ್ಯಾಷನಲ್ ಲೇಔಟ್ ಮನೆಯೊಂದರಲ್ಲಿ ಈ ಅಕ್ರಮ ದಂಧೆ ನಡೆಯುತ್ತಿತ್ತು.ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಪೊಲೀಸರು ಮೂವರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಗಂಗಾಧರ, ಶ್ಯಾಮಣ್ಣ, ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ.
ದಾಳಿಯ ವೇಳೆ ದಂಧೆಗೆ ಬಳಸಿಕೊಳ್ಳಲಾಗಿದ್ದ ಓರ್ವ ಮಹಿಳೆಯನ್ನು ಪೊಲೀಸರು ರಕ್ಷಿಸಿ, ಸಾಂತ್ವನ ಕೇಂದ್ರಕ್ಕೆ ಕಳುಹಿಸಿಕೊಟ್ಟಿದ್ದಾರೆ.ಖಚಿತ ಮಾಹಿತಿಯ ಮೇರೆಗೆ ರಾಯಚೂರು ಪೊಲೀಸರು ಈ ದಾಳಿ ನಡೆಸಿದ್ದಾರೆ. ಅಕ್ರಮ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.ಪ್ರಕರಣ ದಾಖಲು: ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ. ಅಮಾಯಕ ಹೆಣ್ಣು ಮಕ್ಕಳಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ವೇಶ್ಯಾವಾಟಿಕೆ ಅಡ್ಡೆಗೆ ದೂಡಲಾಗಿತ್ತು ಎನ್ನಲಾಗಿದೆ. ಜಿಲ್ಲೆಯಲ್ಲಿ ಇಂತಹ ಅಕ್ರಮ ಚಟುವಟಿಕೆಗಳ ಮೇಲೆ ಪೊಲೀಸರು ನಿರಂತರ ನಿಗಾ ವಹಿಸಿದ್ದು, ಸಾರ್ವಜನಿಕರು ಇಂತಹ ಮಾಹಿತಿ ಇದ್ದಲ್ಲಿ ಪೊಲೀಸರಿಗೆ ತಿಳಿಸಲು ಕೋರಿದ್ದಾರೆ.

