ಅಮರಾವತಿ: ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ ಏಳು ಜನರು ಸ್ಥಳದಲ್ಲೇ ದುರಂತ ಅಂತ್ಯ ಕಂಡಿದ್ದಾರೆ. ಅಮರಾವತಿ ಜಿಲ್ಲೆಯ ಧಮನ್ಗಾಂವ್ ರೈಲು ನಿಲ್ದಾಣದ ಸಮೀಪದ ಎಕ್ಸ್ಪ್ರೆಸ್ವೇಯಲ್ಲಿ ಈ ಘಟನೆ ನಡೆದಿದೆ. ವೇಗವಾಗಿ ಬಂದ ಟ್ರಕ್ ಹಾಗೂ ಬೊಲೆರೊ ಪಿಕ್-ಅಪ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಪಿಕ್-ಅಪ್ ವಾಹನದಲ್ಲಿದ್ದ ಏಳು ಜನರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.
ಅಪಘಾತದಲ್ಲಿ ಸುಮಾರು 16 ಜನರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.