ಗಾಂಧಿನಗರ: ಟ್ಯಾಂಕರ್‌ಗೆ ಡಿಕ್ಕಿಯಾದ ಪರಿಣಾಮ ಬಸ್‌ಗೆ ಬೆಂಕಿ ತಗುಲಿ ನಾಲ್ವರು ಸಾವನ್ನಪ್ಪಿದ ಘಟನೆ Gujarat ರಾಜ್ಯದ ಸುರೇಂದ್ರನಗರ ಜಿಲ್ಲೆಯ ಚೋಟಿಲಾ-ರಾಜ್‌ಕೋಟ್ ರಾಷ್ಟ್ರೀಯ ಹೆದ್ದಾರಿಯ ಸಂಗನಿ ಗ್ರಾಮದ ಬಳಿ ನಡೆದಿದೆ. ಬೆಳಗಿನ ಜಾವ ಸುಮಾರು 2:30ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಬಸ್‌ನಲ್ಲಿ ಸುಮಾರು 40 ಮಂದಿ ಪ್ರಯಾಣಿಸುತ್ತಿದ್ದು, ಅವರಲ್ಲಿ ನಾಲ್ವರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಟ್ಯಾಂಕರ್‌ನಲ್ಲಿ ಯಾವ ವಸ್ತು ಸಾಗಿಸಲಾಗುತ್ತಿತ್ತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಅಪಘಾತದ ತೀವ್ರತೆಗೆ ಬಸ್ ಹಾಗೂ ಟ್ಯಾಂಕರ್ ಎರಡೂ ಕೆಲವೇ ಕ್ಷಣಗಳಲ್ಲಿ ಬೆಂಕಿಗಾಹುತಿಯಾಗಿವೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಹಲವು ಪ್ರಯಾಣಿಕರು ಬಸ್‌ನಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಗಾಯಾಳುಗಳನ್ನು ರಾಜ್‌ಕೋಟ್ ಸಿವಿಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.