ಅಥಣಿ, ಫೆ.15 – ರಾಜ್ಯದಲ್ಲಿ 25 ವರ್ಷ ಪೂರೈಸಿರುವ ಏಕೈಕ ಪ್ರಾದೇಶಿಕ ಪಕ್ಷ ಜೆಡಿಎಸ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಶಹಜಹಾನ ಡೊಂಗರಗಾಂವ ಹೇಳಿದರು.
ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ರೈತರು ಹಾಗೂ ಸಾಮಾನ್ಯ ಜನರ ಪರ ಕೆಲಸ ಮಾಡುತ್ತಿದೆ ಎಂದರು. ರಜತ ಮಹೋತ್ಸವ ಅಂಗವಾಗಿ ವಿಜಯಪುರದಲ್ಲಿ ನಡೆಯಲಿರುವ ಕಿತ್ತೂರು ಕರ್ನಾಟಕ ವಿಭಾಗದ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಕರೆ ನೀಡಿದರು.
ಜಿಲ್ಲಾ ಅಧ್ಯಕ್ಷ ಶಂಕರ ಮಾಡಲಗಿ ಮಾತನಾಡಿ, ಬೆಳಗಾವಿ ಜಿಲ್ಲೆಯಿಂದ ಸಾವಿರಾರು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದರು. ಈ ವೇಳೆ ನೂತನ ಅಥಣಿ ತಾಲೂಕು ಅಧ್ಯಕ್ಷ ದುಂಡಪ್ಪ ನಿಂಗನೂರ ಅವರನ್ನು ಸನ್ಮಾನಿಸಲಾಯಿತು. ಹಲವಾರು ಮುಖಂಡರು ಉಪಸ್ಥಿತರಿದ್ದರು.