ಬಳ್ಳಾರಿ, ಅ.05: ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಎಸ್ಐಆರ್ (ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ 7,561 ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವಂತೆ ದೂರು ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಬಿಎಲ್ಎ-1 ಟಿ. ಶ್ರೀನಿವಾಸ್ ಮೊತ್ಕರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಕಾಂಗ್ರೆಸ್ ನಗರ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್ ನೇತೃತ್ವದಲ್ಲಿ ನೀಡಿದ ದೂರಿನಲ್ಲಿ, ಶ್ರೀನಿವಾಸ್ ಮೊತ್ಕರ್ ಅವರು ಸೆ.22ರಂದು ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣಾಧಿಕಾರಿಗಳಿಗೆ 7,561 ಮತದಾರರ ಹೆಸರುಗಳನ್ನು ತೆಗೆದುಹಾಕುವಂತೆ ಮನವಿ ಸಲ್ಲಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕ್ರಿಯೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮತದಾರರಿಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಎಸ್ಐಆರ್ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆಯಾಗಿದ್ದರೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಮಹಾಪೌರ ಪಿ. ಗಾದೆಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುಮಯೂನ್ ಖಾನ್, ಬುಡಾ ಅಧ್ಯಕ್ಷ ಆಂಜಿನೇಯಲು, ಜಿ.ಜೆ. ರವಿಕುಮಾರ್, ಸರಾಗ ನಾಗರಾಜ್, ಬೋಯಪಾಟಿ ವಿಷ್ಣು, ಶ್ರೀನಿವಾಸ್, ಅಖಿಲ್ ಅಹಮ್ಮದ್, ಶೋಭಾ ಕಾಳಿಂಗ, ಅಫಾಕ್ ಹುಸೇನ್, ವೆಂಕಟ ಲಕ್ಷ್ಮೀನಾರಾಯಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.