ಬಳ್ಳಾರಿ, ಸೆ.23: ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ಅಪಹರಣ, ಅತ್ಯಾಚಾರ ಹಾಗೂ ಕೊಲೆ ಸೇರಿದಂತೆ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಅವುಗಳ ಕುರಿತು ಸಿಐಡಿ ತನಿಖೆ ನಡೆಸಬೇಕು ಎಂದು ಕರ್ನಾಟಕ ಪ್ರದೇಶ ಮಾದಿಗರ ಸಂಘದ ರಾಜ್ಯಾಧ್ಯಕ್ಷ ಪ್ರಭುರಾಜ್ ಕೂಡ್ಲಿ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ಕಳೆದ ಮೂರು ತಿಂಗಳಲ್ಲಿ ಚಿತ್ರದುರ್ಗ, ಬಳ್ಳಾರಿ, ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ದಲಿತರ ಮೇಲೆ 12ಕ್ಕೂ ಹೆಚ್ಚು ಗಂಭೀರ ಸ್ವರೂಪದ ಘಟನೆಗಳು ನಡೆದಿವೆ ಎಂದು ಹೇಳಿದರು. ಇಂತಹ ಪ್ರಕರಣಗಳ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಖಂಡನೀಯ ಎಂದರು.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಗಣೇಶೋತ್ಸವದ ಸಂದರ್ಭದಲ್ಲಿ ದಲಿತ ಯುವಕ ಸಿಂಹಾದ್ರಿ ಹತ್ಯೆಯಾಗಿರುವ ಪ್ರಕರಣವನ್ನು ಪ್ರಸ್ತಾಪಿಸಿದ ಅವರು, ಘಟನೆಯ ಹಿಂದೆ ಯಾವುದೇ ಷಡ್ಯಂತ್ರವಿದೆಯೇ ಎಂಬುದನ್ನು ತನಿಖೆಯಿಂದ ಬಹಿರಂಗಪಡಿಸಬೇಕು. ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವಿದೆಯೇ ಎಂಬ ಬಗ್ಗೆಯೂ ಸಮಗ್ರ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.
ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಿ, ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಭದ್ರತೆ ಹಾಗೂ ನ್ಯಾಯ ಒದಗಿಸಬೇಕು. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗೆ ರಾಜ್ಯದಲ್ಲಿ ವಿಶೇಷ ಫಾಸ್ಟ್ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸಬೇಕು ಎಂದು ಅವರು ಒತ್ತಾಯಿಸಿದರು.
ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳದಿದ್ದರೆ ಸಂಘಟನೆ ವತಿಯಿಂದ ಮುಂದಿನ ಹಂತದಲ್ಲಿ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಮರಿಯಪ್ಪ ಎಸ್., ಎರಗುಡಿ ಶಿವಶಂಕರ್, ಪ್ರತಾಪ್, ಲಕ್ಷ್ಮಣ್ ಭಂಡಾರಿ, ಕಪ್ಪಗಲ್ ಹುಲಿಯಪ್ಪ, ಈಶ್ವರಗುಡಿ ರಾಜೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.