ಬಾಗಲಕೋಟೆ : ಅಕ್ಟೋಬರ ೧೫ : ಅನುದಾನ ಮಂಜೂರಾದ ಬಳಿಕ ಕಾಮಗಾರಿಗಳನ್ನು ಅನಗತ್ಯವಾಗಿ ವಿಳಂಬ ಮಾಡದೇ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕೆಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ಸಭಾಭವನದಲ್ಲಿಂದು ಜರುಗಿದ ಜಿ.ಪಂ ಲಿಂಕ್ ಡಾಕ್ಯೂಮೆಂಟ್ ಅನುದಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಲಿಂಕ್ ಡಾಕ್ಯೂಮೆಂಟ್ ಅನುದಾನದಡಿ ಮಂಜೂರಾದ ಯಾವುದೇ ಕಾಮಗಾರಿ ಇನ್ನು ಆರಂಭವಾಗದಿದ್ದಲ್ಲಿ ಕೂಡಲೇ ಪ್ರಾರಂಬಿಸಬೇಕು ಪೂರ್ಣಗೊಂಡ ಕಾಮಗಾರಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಅನುದಾನವನ್ನು ನಿಗದಿತ ಉದ್ದೇಶಕ್ಕೆ ಬಳಸಬೇಕು ಎಂದರು.
ಈ ವರ್ಷ ಆರೋಗ್ಯ ಇಲಾಖೆಗೆ ಒದಗಿಸಲಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಆಸ್ಪತ್ರೆಗಳಿಗೆ ಅಗತ್ಯವಿರುವ ಸಿವಿಲ್ ಕಾಮಗಾರಿಗಳು ಸೇರಿದಂತೆ ಸಣ್ಣಪುಟ್ಟಣ ದುರಸ್ತಿ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೊಂಡು ಆಸ್ಪತ್ರೆಗಳನ್ನು ಅಭಿವೃದ್ದಿಪಡಿಸಬೇಕು. ಬಾದಾಮಿ ತಾಲೂಕಿನ ಕೆರೂರು ಹಾಗೂ ಬೀಳಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಕೈಗೊಂಡಿರುವ ಅಭಿವೃದ್ದಿ ಕಾಮಗಾರಿಗಳ ಮಾದರಿಯಲ್ಲಿ ಜಿಲ್ಲೆಯ ಇತರೆ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಕ್ರಮವಹಿಸಬೇಕು ಎಂದರು.
ಆಯುಷ ಇಲಾಖೆಯಲ್ಲಿಯೂ ವೈದ್ಯರು ನಿಯಮಿತವಾಗಿ ಕರ್ತವ್ಯ ನಿರ್ವಹಿಸುವಂತೆ ಹಾಗೂ ಸಾರ್ವಜನಿಕರಿಗೆ ಅಗತ್ಯ ವೈದ್ಯಕೀಯ ಸೇವೆ ದೊರೆಯುವಂತೆ ನೋಡಿಕೊಳ್ಳಬೇಕು. ವೈದ್ಯರು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುತ್ತಿರುವ ಕುರಿತು ಅಧಿಕಾರಿಗಳು ಮೇಲ್ವಿಚಾರಣೆ ನಡೆಸಬೇಕು ಎಂದರು. ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳಿಗೆ ಸಂಬಂಧಿಸಿದ ಕಾಮಗಾರಿಗಳು ಪೂರ್ಣಗೊಳಿಸಬೇಕು. ಬದಲಾವಣೆ ಕಾಮಗಾರಿಗಳು ಅಗತ್ಯವಿದ್ದಲ್ಲಿ ಅದನ್ನು ತಕ್ಷಣವೇ ಮೇಲಾಧಿಕಾರಿಗಳ ಗಮನಕ್ಕೆ ತಂದು ಅನುಮೋದನೆ ಪಡೆಯಬೇಕು ಎಂದು ತಿಳಿಸಿದರು.
ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಹಾಗೂ ಹೊರಗುತ್ತಿಗೆ ನೌಕರರ ವೇತನ ಪಾವತಿಗೆ ಸಂಬಂಧಿಸಿದಂತೆ ಪ್ರತಿ ತಿಂಗಳು ನಿಯಮಿತವಾಗಿ ಪಾವತಿಸಲು ಕ್ರಮವಹಿಸಬೇಕು. ಬುದ್ದಿ ಮಾಂದ್ಯ ಮಕ್ಕಳಿಗಾಗಿ ನಡೆಯುತ್ತಿರುವ ವಿಶೇಷ ಶಾಲೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ ಅಗತ್ಯ ಸೌಲಭ್ಯ, ಶಿಕ್ಷಣ ಹಾಗೂ ಆರೈಕೆ ದೊರೆಯುತ್ತಿರುವ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ತಮ್ಮ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಕಾಲಕಾಲಕ್ಕೆ ಭೇಟಿ ನೀಡಿ ಅಲ್ಲಿನ ಮಕ್ಕಳ ಹಾಜರಾತಿ, ಪೌಷ್ಠಿಕ ಆಹಾರ ವಿತರಣೆ, ಕಾರ್ಯನಿರ್ವಹಣೆ ಪರಿಶೀಲಿಸುವ ಕೆಲಸವಾಗಬೇಕು ಎಂದರು.
ಸಭೆಯಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು ಅಲ್ಲಾಪೂರ, ಮುಖ್ಯ ಲೆಕ್ಕಾಧಿಕಾರಿ ಸಿದ್ರಾಮೇಶ್ವರ ಉಕ್ಕಲಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.