ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಅನಿಲ ಸ್ಫೋಟದಲ್ಲಿ 82 ಮಂದಿ ಮೃತಪಟ್ಟಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ನಡೆದ ಅತ್ಯಂತ ದೊಡ್ಡ ಕೈಗಾರಿಕಾ ದುರಂತಗಳಲ್ಲಿ ಇದೊಂದು ಎಂದು ಪರಿಗಣಿಸಲಾಗಿದೆ. ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಸಂಜೆ 7:29ರ ಸುಮಾರಿಗೆ ಸ್ಫೋಟ ಸಂಭವಿಸಿತು. ಆ ವೇಳೆ ಗಣಿಯೊಳಗೆ 247 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವರಲ್ಲಿ ಬಹುತೇಕರನ್ನು ಶನಿವಾರ ಬೆಳಗ್ಗೆ ಸುರಕ್ಷಿತವಾಗಿ ಹೊರತೆಗೆದುಕೊಳ್ಳಲಾಗಿದೆ. ಸ್ಫೋಟದಿಂದ 82 ಮಂದಿ ಮೃತಪಟ್ಟಿದ್ದು, ನಾಪತ್ತೆಯಾಗಿರುವ ಒಂಬತ್ತು ಮಂದಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಾಳುಗಳಿಗೆ ತುರ್ತು ಚಿಕಿತ್ಸೆ ಒದಗಿಸಲು ಸೂಚಿಸಿರುವ ಚೀನಾ ಅಧ್ಯಕ್ಷ Xi Jinping, ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಈ ದುರ್ಘಟನೆಯಿಂದ ಎಲ್ಲಾ ಇಲಾಖೆಗಳು ಪಾಠ ಕಲಿಯಬೇಕು. ಕೆಲಸದ ಸ್ಥಳಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಂತಹ ದುರಂತಗಳು ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿನ್‌ಪಿಂಗ್ ಹೇಳಿದ್ದಾರೆ.