ಬೆಳಗಾವಿ: ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಹಾಗೂ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಸೋಮವಾರ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಯಿತು.
ಆರ್ಟಿಓ ವೃತ್ತದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯ ಕಾಂಗ್ರೆಸ್ ಭವನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಘೋಷಣೆಗಳೊಂದಿಗೆ ಕೋರ್ಟ್ ವೃತ್ತದವರೆಗೆ ಸಾಗಿತು. ಬಳಿಕ ಪ್ರತಿಭಟನಾಕಾರರು ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಇದೆ ವೇಳೆ ಅನೇಕ ಕಾಂಗ್ರೆಸ್ ಮುಖಂಡ ಮಲಗೌಡ ಪಾಟೀಲ ಮಾತನಾಡಿ, ಎಸ್ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ಕುರಿತು ಆಕ್ಷೇಪ ವ್ಯಕ್ತಪಡಿಸಿ, ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡಿ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಅಸ್ಸಾಂ, ಪಶ್ಚಿಮ ಬಂಗಾಳ, ಬಿಹಾರ ಹಾಗೂ ಮಹಾರಾಷ್ಟ್ರದಲ್ಲಿ ಮರುಚುನಾವಣೆ ನಡೆಸಬೇಕು ಮತ್ತು ಕರ್ನಾಟಕದಲ್ಲಿ ಮರು ಎಸ್ಐಆರ್ ಪ್ರಕ್ರಿಯೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು , ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ವ್ಯವಸ್ಥಿತ ಕ್ರಮ ನಡೆಯುತ್ತಿದೆ ಎಂದು ಆರೋಪಿಸಿ, ಸಂಬಂಧಪಟ್ಟ ಚುನಾವಣಾ ಅಧಿಕಾರಿಗಳು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಹಿಳಾ ಕಾಂಗ್ರೆಸ್ ಮುಖಂಡರು, ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ರಾಜಾ ಸಲೀಂ ಕಾಶಮ್ಮನವರ, ಬಸವರಾಜ್ ಶೇಗಾವಿ, ವಿವೇಕ ಜತ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.