ಗುಬ್ಬಿ: ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ತಾಲೂಕಿನಲ್ಲಿ ಯಾವುದೇ ರೀತಿಯ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ತಹಸೀಲ್ದಾರ್ ಬಿ. ಆರತಿ ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದು, ಅಕ್ಟೋಬರ್ 23ರಂದು ಚುನಾವಣೆ ನಡೆಯಲಿದೆ. ಅ.27 ಮತದಾನ ನಡೆಯಲಿದೆ, ಚುನಾವಣಾ ಪ್ರಕ್ರಿಯೆಯು ಅಕ್ಟೋಬರ್ 31ರಂದು ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ ಎಂದರು.
ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ರಾಜಕೀಯ ಪಕ್ಷಗಳು ಯಾವುದೇ ಕಾರ್ಯಕ್ರಮಗಳನ್ನು ನಡೆಸುವ ಮುನ್ನ ಸಂಬಂಧಿಸಿದ ಅಧಿಕಾರಿಗಳಿಂದ ಅಗತ್ಯ ಅನುಮತಿ ಪಡೆಯಬೇಕು. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಕಾನೂನುಬಾಹಿರ ಚಟುವಟಿಕೆಗಳು ನಡೆಯದಂತೆ ಹಾಗೂ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ತಾಲೂಕಿನಲ್ಲಿ ಒಟ್ಟು 7 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದ್ದು, ಕಸಬ ಹೋಬಳಿಯಲ್ಲಿ ಎರಡು ಹಾಗೂ ಉಳಿದ ಹೋಬಳಿಗಳಲ್ಲಿ ತಲಾ ಒಂದು ಮತಗಟ್ಟೆ ಇರಲಿದೆ. ತಾಲೂಕಿನಲ್ಲಿ ಒಟ್ಟು 3,734 ಪದವೀಧರ ಮತದಾರರು ಇದ್ದು, 2,116 ಪುರುಷರು ಹಾಗೂ 1,618 ಮಹಿಳಾ ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು.
ಹೋಬಳಿವಾರು ಮತದಾರರ ವಿವರದಂತೆ ಕಸಬ ಹೋಬಳಿಯಲ್ಲಿ 1,314, ಹಾಗಲವಾಡಿ 333, ಕಡಬ 511, ಸಿಎಸ್.ಪುರ 174, ನಿಟ್ಟೂರು 817 ಹಾಗೂ ಚೇಳೂರು ಹೋಬಳಿಯಲ್ಲಿ 585 ಮತದಾರರಿದ್ದಾರೆ.
ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ರಾಜಕೀಯ ಪಕ್ಷಗಳ ಬ್ಯಾನರ್, ಪೋಸ್ಟರ್ ಸೇರಿದಂತೆ ಚುನಾವಣಾ ನೀತಿ ಸಂಹಿತೆಗೆ ವಿರುದ್ಧವಾಗಿರುವ ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸುವಂತೆ ಸೂಚಿಸಲಾಗಿದೆ ಎಂದು ತಹಸೀಲ್ದಾರ್ ಬಿ. ಆರತಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜಕೀಯ ಮುಖಂಡರಾದ ಕೆ.ಆರ್. ವೆಂಕಟೇಶ್, ಯತೀಶ್ ಕುಮಾರ್, ಡಿ. ರಘು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.