ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹಲವು ತಿಂಗಳಿಂದ ಸದ್ದು ಮಾಡುತ್ತಿದ್ದ ನಾಯಕತ್ವ ಬದಲಾವಣೆಯ ಚರ್ಚೆಗೆ ಕೊನೆಗೂ ತೆರೆ ಬಿದ್ದಿದೆ. ಸಚಿವರೊಂದಿಗೆ ನಡೆದ ಉಪಹಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ್ದು, ಮುಂದಿನ ಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಎಂದು ಮಾಹಿತಿ ನೀಡಿದ್ದಾರೆ.
ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆ ಹಲವು ಭಾವುಕ ಕ್ಷಣಗಳಿಗೆ ಸಾಕ್ಷಿಯಾಯಿತು. ಸಭೆಗೆ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದು, ಬಳಿಕ ಆತ್ಮೀಯವಾಗಿ ಅಪ್ಪಿಕೊಂಡರು.
ಸಚಿವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಇಂದು ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದರು. ಲೋಕಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ನೀಡುತ್ತೇನೆ, ಅವರು ಇಲ್ಲದಿದ್ದರೆ ಕಾರ್ಯದರ್ಶಿಗೆ ಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಭಾವುಕರಾಗಿ ಮಾತನಾಡಿದ ಸಿದ್ದರಾಮಯ್ಯ, ತಮ್ಮ ಆಡಳಿತದ ಅವಧಿಯಲ್ಲಿ ಜಾರಿಗೊಂಡ ಯೋಜನೆಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಜನಪರ ಯೋಜನೆಗಳನ್ನು ಮುಂದುವರಿಸಿ, ಬಿಜೆಪಿಯ ವಿರುದ್ಧ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಎಂದು ಸಚಿವರಿಗೆ ಸಲಹೆ ನೀಡಿದರು. ಇದೇ ವೇಳೆ ಮುಂದಿನ ಸಿಎಂ ಡಿಕೆ. ಶಿವಕುಮಾರ್ ಎಂದು ಅಧಿಕೃತವಾಗಿ ಸೂಚನೆ ನೀಡಿದರು.
ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಪಕ್ಷದ ಅಧ್ಯಕ್ಷನಾಗಿ ಇಂದಿನ ಹಂತ ತಲುಪಿರುವುದಕ್ಕೆ ಎಲ್ಲ ಸಚಿವರ ಸಹಕಾರವೇ ಕಾರಣ ಎಂದು ಹೇಳಿದರು. ಮುಂದಿನ ದಿನಗಳಲ್ಲೂ ಇದೇ ರೀತಿಯ ಬೆಂಬಲ ಮತ್ತು ಸಹಕಾರ ನೀಡುವಂತೆ ಮನವಿ ಮಾಡಿದರು.
ಇನ್ನಿತರ ರಾಜಕೀಯ ವಿಚಾರಗಳನ್ನು ಪ್ರಸ್ತಾಪಿಸದೇ, ಎಲ್ಲರ ಸಹಕಾರ ಮುಂದುವರಿಯಲಿ ಎಂದು ಡಿಕೆಶಿ ವಿನಂತಿಸಿಕೊಂಡರು. ಜೊತೆಗೆ ಸಿದ್ದರಾಮಯ್ಯ ಅವರ ಆಡಳಿತ ಮತ್ತು ಯೋಜನೆಗಳನ್ನು ಮೆಚ್ಚುಗೆ ವ್ಯಕ್ತಪಡಿಸಿದರು ಎನ್ನಲಾಗಿದೆ.
ಉಪಹಾರ ಸಭೆಯ ಬಳಿಕ ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದು, ಮಧ್ಯಾಹ್ನ ಲೋಕಭವನಕ್ಕೆ ತೆರಳಿ ಅಧಿಕೃತವಾಗಿ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ಇದರ ನಡುವೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಆತ್ಮೀಯವಾಗಿ ಆಲಿಂಗಿಸಿಕೊಂಡಿರುವ ಚಿತ್ರಗಳನ್ನು ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. “ಅಂದು, ಇಂದು, ಎಂದೆಂದಿಗೂ... ಒಗ್ಗಟ್ಟೇ ನಮ್ಮ ಶಕ್ತಿ; ಜನಸೇವೆಯೇ ನಮ್ಮ ಬದ್ಧತೆ” ಎಂಬ ಸಂದೇಶವನ್ನು ಪಕ್ಷ ಪ್ರಕಟಿಸಿದೆ.