ನವದೆಹಲಿ: ನ್ಯಾಯಾಲಯದ ವಿಚಾರಣೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ (Delhi High Court) ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ನೋಟಿಸ್ ಜಾರಿ ಮಾಡಿದೆ.
ಹೊಸ ಅಬಕಾರಿ ನೀತಿಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರು ವೈಯಕ್ತಿಕವಾಗಿ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ವಾದವನ್ನು ಮಂಡಿಸಿದ್ದರು. ನಂತರ ಆ ವಿಚಾರಣೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ನ್ಯಾಯಾಲಯದ ವಿಚಾರಣೆಯ ದೃಶ್ಯಗಳನ್ನು ಸಾರ್ವಜನಿಕವಾಗಿ ಪ್ರಸಾರ ಮಾಡುವುದು ನ್ಯಾಯಾಂಗದ ಗೌರವ ಹಾಗೂ ಮಾನಕ್ಕೆ ಧಕ್ಕೆಯಾಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಕಾರಣದಿಂದ ಅಂತಹ ವಿಷಯಗಳನ್ನು ತಕ್ಷಣವೇ ತೆಗೆದುಹಾಕುವಂತೆ ನ್ಯಾಯಾಲಯ ಆದೇಶಿಸಿದೆ. ನ್ಯಾಯಮೂರ್ತಿ ಸ್ವರ್ಣಾ ಕಾಂತಾ ಶರ್ಮಾ ಅವರು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ವಿಡಿಯೋಗಳನ್ನು ತೆಗೆದುಹಾಕಲು ಫೇಸ್‌ಬುಕ್, ಗೂಗಲ್, ಎಕ್ಸ್ ಸೇರಿದಂತೆ ವಿವಿಧ ಸಾಮಾಜಿಕ ಮಾಧ್ಯಮ ಮಧ್ಯಸ್ಥರು ಹಾಗೂ ಸರ್ಚ್ ಎಂಜಿನ್‌ಗಳಿಗೆ ಸೂಚನೆ ನೀಡಿದ್ದಾರೆ.