ನವದೆಹಲಿ, ಮೇ 3: ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ನಾಲ್ಕು ಅಂತಸ್ತಿನ ವಸತಿ ಕಟ್ಟಡದಲ್ಲಿ ಇಂದು ಮುಂಜಾನೆ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಇಂದು ನಸುಕಿನ 4 ಗಂಟೆ ಸುಮಾರಿಗೆ ಕಟ್ಟಡದ ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಮೂರನೇ ಹಾಗೂ ನಾಲ್ಕನೇ ಮಹಡಿಗೆ ವ್ಯಾಪಿಸಿದೆ. ಮಾಹಿತಿ ತಿಳಿದ ಕೂಡಲೇ 14 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತಲುಪುವಷ್ಟರಲ್ಲಿ ಕಟ್ಟಡದ ಮೇಲ್ಮಹಡಿಗಳಲ್ಲಿ ಬೆಂಕಿ ವ್ಯಾಪಕವಾಗಿ ಹರಡಿದ್ದು, ಹಲವರನ್ನು ಕಟ್ಟಡದಿಂದ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಗುರು ತೇಜ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಮಾರು ಎರಡು ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಬೆಳಿಗ್ಗೆ 6 ಗಂಟೆ ವೇಳೆಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಕಟ್ಟಡದ ಹಲವು ಭಾಗಗಳು ಸುಟ್ಟುಹೋಗಿದ್ದು, ಮೇಲ್ಮಹಡಿಯಿಂದ ದಟ್ಟ ಹೊಗೆ ಕಾಣಿಸುತ್ತಿತ್ತು.
ಅವಘಡದಲ್ಲಿ ಮೃತಪಟ್ಟವರ ಶವಗಳನ್ನು ವಶಪಡಿಸಿಕೊಂಡು ದೆಹಲಿ ಪೊಲೀಸ್ ಅಪರಾಧ ತಂಡಕ್ಕೆ ಹಸ್ತಾಂತರಿಸಲಾಗಿದೆ. ಬೆಂಕಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ಎಸಿ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಸ್ಥಳೀಯ ನಿವಾಸಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.
ಘಟನೆಯಲ್ಲಿ ಸುಮಾರು 12ರಿಂದ 15 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ 4ರಿಂದ 5 ಮಂದಿ ನಾಪತ್ತೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಪೊಲೀಸರು ಹಾಗೂ ಅಗ್ನಿಶಾಮಕ ದಳವು ಶೋಧ ಕಾರ್ಯ ಮುಂದುವರಿಸಿದ್ದಾರೆ.