ಬಳ್ಳಾರಿ, ಸೆ.23: ಹಾಸ್ಟೆಲ್ ಕಾರ್ಮಿಕರಿಗೆ ಜುಲೈ ಮತ್ತು ಆಗಸ್ಟ್ ತಿಂಗಳ ಎರಡು ತಿಂಗಳ ಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ AIUTUC ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದ ಬಳ್ಳಾರಿ ಜಿಲ್ಲಾ ಸಮಿತಿ ವತಿಯಿಂದ ಮಂಗಳವಾರ ಜಿಲ್ಲಾ ಪಂಚಾಯತ್ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವ್ಯಾಪ್ತಿಯ ವಸತಿ ಶಾಲೆ ಮತ್ತು ವಸತಿನಿಲಯಗಳಲ್ಲಿ ಮುಖ್ಯ ಅಡುಗೆಯವರು, ಅಡುಗೆ ಸಹಾಯಕರು, ಕಾವಲುಗಾರರು ಸೇರಿದಂತೆ ಕಾರ್ಮಿಕರು ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಅಡುಗೆ ತಯಾರಿಸುವುದು, ಊಟ ಬಡಿಸುವುದು ಸೇರಿದಂತೆ ಹಲವು ಶ್ರಮದಾಯಕ ಕೆಲಸಗಳನ್ನು ನಿರ್ವಹಿಸುತ್ತಿದ್ದರೂ ವೇತನ ಮಾತ್ರ ಸಕಾಲಕ್ಕೆ ಪಾವತಿಯಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿ ತಿಂಗಳ 5ನೇ ತಾರೀಖಿನೊಳಗೆ ವೇತನ ಪಾವತಿಸಬೇಕೆಂಬ ಆದೇಶವಿದ್ದರೂ ಅದನ್ನು ಸಮರ್ಪಕವಾಗಿ ಪಾಲಿಸಲಾಗುತ್ತಿಲ್ಲ. ಎರಡು ತಿಂಗಳ ವೇತನ ಬಾಕಿಯಿಂದಾಗಿ ಕಾರ್ಮಿಕರು ದಿನನಿತ್ಯದ ಜೀವನ ನಿರ್ವಹಣೆಗೆ ಸಾಲದ ಮೊರೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದರು.
ರಾಜ್ಯ ಸರ್ಕಾರವು ಮೇ 22, 2026ರಂದು ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸುವಂತೆ ಆದೇಶಿಸಿದ್ದರೂ, ಒಂದು ತಿಂಗಳ ವೇತನ ಪಾವತಿಸಿದ ಬಳಿಕ ಪರಿಷ್ಕೃತ ವೇತನವನ್ನು ತಡೆಹಿಡಿಯಲಾಗಿದೆ. ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಕೂಡಲೇ ಪರಿಷ್ಕೃತ ವೇತನ ಪಾವತಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ. ಹ್ಯಾರೀಸ್ ಸುಮೇರ್ ಅವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
AIUTUC ಜಿಲ್ಲಾ ಅಧ್ಯಕ್ಷ ಎ. ದೇವದಾಸ್, ಹಾಸ್ಟೆಲ್ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಪ್ರಮೋದ್, ಜಿಲ್ಲಾ ಕಾರ್ಯದರ್ಶಿ ಸುರೇಶ್ ಜಿ., ಮುಖಂಡರಾದ ಮುರಳಿ ಕೃಷ್ಣ, ಲಕ್ಷ್ಮೀದೇವಿ, ಈಶ್ವರಮ್ಮ, ಚೇತನ್, ಸುರೇಶ್, ಸುಂದರ್, ಖಾಜಾಸಾಬ್, ರಾಮು, ಮಲ್ಲಮ್ಮ, ನಾಗೇಶಯ್ಯ ಸೇರಿದಂತೆ ನೂರಾರು ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.