ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ಬೆಂಗಳೂರಿನ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಮಂಗಳವಾರ ದಿಢೀರ್ ದಾಳಿ ನಡೆಸಿ ಶೋಧ ನಡೆಸಿದ್ದಾರೆ.
ಬೆಂಗಳೂರಿನ ಸಂಜಯನಗರ ಸಮೀಪದ ಪ್ರತಿಷ್ಠಿತ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸಕ್ಕೆ ಕೇಂದ್ರ ಭದ್ರತಾ ಪಡೆಯ (CRPF) ಯೋಧರ ಕಾವಲಿನೊಂದಿಗೆ ಆಗಮಿಸಿದ ಇಡಿ ಅಧಿಕಾರಿಗಳ ತಂಡ, ಮನೆಯೊಳಗೆ ಶೋಧ ಕಾರ್ಯಾಚರಣೆ ಕೈಗೊಂಡಿದೆ. ಏಕಕಾಲದಲ್ಲಿ ಮನೆ ಪ್ರವೇಶಿಸಿದ ಅಧಿಕಾರಿಗಳು, ಮನೆಯಲ್ಲಿದ್ದ ಮಹತ್ವದ ಕಡತಗಳು, ಬ್ಯಾಂಕ್ ಖಾತೆ ವಿವರಗಳು ಹಾಗೂ ಆಸ್ತಿ-ಪಾಸ್ತಿ ದಾಖಲೆಗಳನ್ನು ಜಾಲಾಡುತ್ತಿದ್ದಾರೆ.
ಏನಿದು ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣ?
ರಾಜ್ಯ ಪಶುಸಂಗೋಪನಾ ಇಲಾಖೆಯಲ್ಲಿನ ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಪ್ರಮಾಣದ ಅಕ್ರಮ, ಹಣದ ದುರುಪಯೋಗ ಹಾಗೂ ಅರ್ಹ ಅಭ್ಯರ್ಥಿಗಳನ್ನು ಕಡೆಗಣಿಸಿ ಅಕ್ರಮವಾಗಿ ಆಯ್ಕೆ ಮಾಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಕೋಟ್ಯಂತರ ರೂಪಾಯಿ ಮನಿ ಲಾಂಡರಿಂಗ್ (ಅಕ್ರಮ ಹಣ ವರ್ಗಾವಣೆ) ನಡೆದಿರುವ ಶಂಕೆ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಇಡಿ ಅಧಿಕಾರಿಗಳು, ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಶಿವಶಂಕರಪ್ಪ ಸಾಹುಕಾರ್ ಅವರು ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ನಡೆದ ಈ ನೇಮಕಾತಿ ಪ್ರಕ್ರಿಯೆಯಲ್ಲಿ ಅವರ ಪಾತ್ರವೇನು, ಹಣದ ವ್ಯವಹಾರಗಳು ಹೇಗೆ ನಡೆದಿವೆ ಎಂಬ ಬಗ್ಗೆ ಮಾಹಿತಿ ಕಲೆಹಾಕಲು ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ದಾಳಿಯ ವೇಳೆ ಅಧಿಕಾರಿಗಳು ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್ ಸೇರಿದಂತೆ ಡಿಜಿಟಲ್ ಸಾಕ್ಷ್ಯಗಳನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ಮುಂದುವರಿಸಿದ್ದಾರೆ. ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಮನೆ ಮೇಲೆಯೇ ಇಡಿ ದಾಳಿ ನಡೆದಿರುವುದು ರಾಜ್ಯದ ಆಡಳಿತ ಹಾಗೂ ಉದ್ಯೋಗಾಂಕ್ಷಿಗಳ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.