Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಹೆದ್ದಾರಿ ತಡೆ ಅಂತ್ಯ; ಹುಬ್ಬಳ್ಳಿಗೆ ರೈತರ ಪಾದಯಾತ್ರೆ

ಬೆಳಗಾವಿ, ಅ. 15 (ಸಮದರ್ಶಿ ಸುದ್ದಿ): ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಿಸುವಂತೆ ಆಗ್ರಹಿಸಿ ಮಂಗಳವಾರದಿಂದ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರು ನಡೆಸುತ್ತಿದ್ದ ಅಹೋರಾತ್ರಿ ರಸ್ತೆ ತಡೆ ಪ್ರತಿಭಟನೆ ಗುರುವಾರ ಮುಂಜಾನೆ ಅಂತ್ಯಗೊಂಡಿದೆ. ಇದರೊಂದಿಗೆ 2 ದಿನಗಳಿಂದ ಸ್ಥಗಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ವಾಹನ ಸಂಚಾರ ಪುನರಾರಂಭಗೊಂಡಿದೆ. ಮತ್ತೊಂದೆಡೆ, ರೈತರು ಹತ್ತರಗಿಯಿಂದ ಹುಬ್ಬಳ್ಳಿಗೆ ಪಾದಯಾತ್ರೆ ಆರಂಭಿಸುವ ಮೂಲಕ ಹೋರಾಟ ಮುಂದುವರಿಸಿದ್ದಾರೆ.

ಕಬ್ಬಿನ ದರ ನಿಗದಿ ಕುರಿತು ಸೋಮವಾರ ದೆಹಲಿಯಲ್ಲಿ ಕೇಂದ್ರ ಸರಕಾರದೊಂದಿಗೆ ನಡೆದ ಮಾತುಕತೆ ವಿಫಲಗೊಂಡ ಹಿನ್ನೆಲೆಯಲ್ಲಿ ಮಂಗಳವಾರದಿಂದ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್‌ಪೋಸ್ಟ್, ಹುಕ್ಕೇರಿ ತಾಲೂಕಿನ ಹತ್ತರಗಿ ಹಾಗೂ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್‌ಪ್ಲಾಜಾಗಳ ಬಳಿ ಸಾವಿರಾರು ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನಾಕಾರರು ಟ್ರ್ಯಾಕ್ಟರ್‌ಗಳು ಹಾಗೂ ಎತ್ತಿನ ಬಂಡಿಗಳನ್ನು ಹೆದ್ದಾರಿಯಲ್ಲಿ ನಿಲ್ಲಿಸಿ ವಾಹನ ಸಂಚಾರಕ್ಕೆ ತಡೆಯೊಡ್ಡಿದ್ದರು. ಮಂಗಳವಾರ ಮತ್ತು ಬುಧವಾರ 2 ರಾತ್ರಿ ಹೆದ್ದಾರಿಯಲ್ಲೇ ಕಳೆದ ರೈತರಿಗೆ ಸ್ಥಳದಲ್ಲಿಯೇ ಅಡುಗೆ ಸಿದ್ಧಪಡಿಸಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಹೋರಾತ್ರಿ ಧರಣಿಯಿಂದಾಗಿ ನಿಪ್ಪಾಣಿಯಿಂದ ಕಿತ್ತೂರುವರೆಗೆ ಸಾವಿರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದ್ದರು.

ಹುಬ್ಬಳ್ಳಿಯತ್ತ ರೈತರ ಪಾದಯಾತ್ರೆ: ರಸ್ತೆ ತಡೆ ಹೋರಾಟ ಹಿಂಪಡೆದ ಬೆನ್ನಲ್ಲೇ ರೈತರು ಹತ್ತರಗಿ ಟೋಲ್‌ಪ್ಲಾಜಾದಿಂದ ಹುಬ್ಬಳ್ಳಿಯತ್ತ ಪಾದಯಾತ್ರೆ ಆರಂಭಿಸಿದ್ದಾರೆ. ಹಿರೇಬಾಗೇವಾಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರೂ ಪಾದಯಾತ್ರೆಯಲ್ಲಿ ಸೇರಿಕೊಳ್ಳಲಿದ್ದು, ಶುಕ್ರವಾರ ಹುಬ್ಬಳ್ಳಿ ತಲುಪುವ ನಿರೀಕ್ಷೆಯಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಚುನಪ್ಪ ಪೂಜೇರಿ ತಿಳಿಸಿದ್ದಾರೆ. ಹತ್ತರಗಿಯಲ್ಲಿ ನಡೆದ ಅಹೋರಾತ್ರಿ ಪ್ರತಿಭಟನೆಯ ನೇತೃತ್ವವನ್ನೂ ಪೂಜೇರಿ ವಹಿಸಿದ್ದರು.

ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ: ರೈತರ ರಸ್ತೆ ತಡೆಯಿಂದ ಸಾರ್ವಜನಿಕ ಸಂಚಾರಕ್ಕೆ ತೀವ್ರ ಅಡಚಣೆಯಾಗಿದ್ದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರೊಂದಿಗೆ ಪೊಲೀಸರು ಮಾತುಕತೆ ನಡೆಸಿದ್ದರು. ಸಾರ್ವಜನಿಕರ ಹಿತದೃಷ್ಟಿಯಿಂದ ಹೆದ್ದಾರಿ ತೆರವುಗೊಳಿಸುವಂತೆ ಮಾಡಿದ ಮನವಿಗೆ ರೈತರು ಸ್ಪಂದಿಸಿದ್ದು, ಗುರುವಾರ ಮುಂಜಾನೆಯಿಂದ ವಾಹನ ಸಂಚಾರ ಪುನರಾರಂಭಗೊಂಡಿದೆ ಎಂದು ಬೆಳಗಾವಿ ಎಸಿಪಿ ನಾರಾಯಣ ಬರಮನಿ ತಿಳಿಸಿದ್ದಾರೆ.

ಹುಬ್ಬಳ್ಳಿಯತ್ತ ಸಾಗುತ್ತಿರುವ ರೈತರ ಪಾದಯಾತ್ರೆಗೆ ಹೆದ್ದಾರಿಯ ಒಂದು ಬದಿಯನ್ನು ಮೀಸಲಿಡಲಾಗಿದೆ. ವಾಹನಗಳ ಸಂಚಾರಕ್ಕಾಗಿ ಮತ್ತೊಂದು ಬದಿಯ ರಸ್ತೆಯಲ್ಲಿ ಎರಡೂ ದಿಕ್ಕಿನ ವಾಹನಗಳು ಸಂಚರಿಸುವಂತೆ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ