ದಾವಣಗೆರೆ: ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅತಾವುಲ್ಲಾ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ. ಅತಾವುಲ್ಲಾ (46) ಮೇಲೆ ಭದ್ರಾವತಿಯ ಶೇಖ್ ದಸ್ತುಗಿರಿ, ಜಬೀವುಲ್ಲಾ ಮತ್ತು ಸಹಚರರು ದಾಳಿ ನಡೆಸಿರುವ ಆರೋಪ ಕೇಳಿಬಂದಿದೆ. ಹಣದ ವಿಚಾರವಾಗಿ ಈ ಹಿಂದೆ ನಡೆದಿದ್ದ ಗಲಾಟೆಯೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ. ಶುಕ್ರವಾರ ತಡರಾತ್ರಿ ಬೈಕ್‌ನಲ್ಲಿ ಬಂದ ಆರೋಪಿಗಳು ಕತ್ತಿ ಮತ್ತು ಮಚ್ಚುಗಳಿಂದ ಏಕಾಏಕಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಚನ್ನಗಿರಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.