ವಿಜಯಪುರ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಗುರುವಾರ (ಮೇ 14) ತಡರಾತ್ರಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿದ ಪರಿಣಾಮ ಸಿಂದಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ. ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದು, ಸಚಿವ ಎಂ.ಬಿ ಪಾಟೀಲ್ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ. ಮೃತರನ್ನು ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಮತ್ತು ಕೀರ್ತಿ ಬಡಿಗೇರ (9) ಎಂದು ಗುರುತಿಸಲಾಗಿದೆ. ಮನೆ ದುರಸ್ತಿ ಹಿನ್ನೆಲೆ ಕುಟುಂಬ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ರಾತ್ರಿ ವೇಳೆ ಮಲಗಿದ್ದಾಗ ಭಾರೀ ಮಳೆಯಿಂದ ಮೇಲ್ಛಾವಣಿ ಕುಸಿದು ದುರಂತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಮನೆಯ ಹೊರಭಾಗದಲ್ಲಿ ಮಲಗಿದ್ದ ಗುರುನಾಥ ಅವರ ತಾಯಿ ಮತ್ತು ಪುತ್ರ ಅದೃಷ್ಟವಶಾತ್ ಪಾರಾಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸಿಂದಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶವಗಳನ್ನು ಹೊರತೆಗೆದರು. ದುರ್ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಭೇಟಿ ನೀಡಿದ ಸಚಿವ ಎಂ.ಬಿ ಪಾಟೀಲ್ ಸಾಂತ್ವನ ಹೇಳಿದರು. ಸರ್ಕಾರದಿಂದ ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ ಅವರು, ವೈಯಕ್ತಿಕ ನೆರವು ಸಹ ನೀಡುವುದಾಗಿ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.