ಬಳ್ಳಾರಿ, ಅ.12: ರಾಜ್ಯದಲ್ಲಿ 20 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ನದಾಫ್/ಪಿಂಜಾರ ಸಮಾಜವು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿದ್ದು, ಸರ್ಕಾರದ ಯೋಜನೆಗಳ ಸೌಲಭ್ಯ ಪಡೆಯಲು ಎದುರಾಗುತ್ತಿರುವ ತಾಂತ್ರಿಕ ತೊಂದರೆಗಳನ್ನು ನಿವಾರಿಸಿ, ಸಮಾಜದ ಸಬಲೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ನದಾಫ್ ಪಿಂಜಾರ ಸಂಘದ ರಾಜ್ಯಾಧ್ಯಕ್ಷ ಎಚ್. ಜಲೀಲ್ ಸಾಬ್ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ರಾಜ್ಯ ಹಾಗೂ ಬಳ್ಳಾರಿ ಜಿಲ್ಲಾ ಘಟಕಗಳ ಸಹಯೋಗದಲ್ಲಿ ನವೆಂಬರ್ 8ರಂದು ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ 34ನೇ ರಾಜ್ಯಮಟ್ಟದ ಸಂಸ್ಥಾಪನಾ ದಿನಾಚರಣೆ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸಮಾಜವು ರಾಜ್ಯದ ಪ್ರವರ್ಗ-1 ಹಾಗೂ ಕೇಂದ್ರದ ಒಬಿಸಿ ಮೀಸಲಾತಿ ಪಟ್ಟಿಯಲ್ಲಿದ್ದರೂ, ಸರ್ಕಾರಿ ಯೋಜನೆಗಳ ಪ್ರಯೋಜನ ಪಡೆಯುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದೆ. ರಾಜಕೀಯ ಪ್ರೋತ್ಸಾಹದ ಕೊರತೆಯಿಂದ ನಿರೀಕ್ಷಿತ ಅಭಿವೃದ್ಧಿ ಸಾಧ್ಯವಾಗಿಲ್ಲ. ಹೀಗಾಗಿ ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ವಿಶೇಷ ಗಮನಹರಿಸಬೇಕು ಎಂದರು.
ಸಂಘವು ಕಳೆದ ಏಳು ವರ್ಷಗಳಿಂದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುತ್ತಿದ್ದು, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಮತ್ತು ಶಿಕ್ಷಣ ಒದಗಿಸಲು ಶ್ರಮಿಸುತ್ತಿದೆ. ಈ ಸೌಲಭ್ಯ ಪಡೆದ ವಿದ್ಯಾರ್ಥಿಗಳು ಶೇ.85ರಿಂದ 97ಕ್ಕೂ ಅಧಿಕ ಅಂಕ ಗಳಿಸಿ ಸಾಧನೆ ಮಾಡಿದ್ದಾರೆ ಎಂದು ಹೇಳಿದರು.
ಸಂಸ್ಥಾಪನಾ ದಿನಾಚರಣೆಯಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’, ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ, ಸಾಂಪ್ರದಾಯಿಕ ವೃತ್ತಿಯಲ್ಲಿ ತೊಡಗಿರುವವರಿಗೆ ‘ಕಾಯಕ ಯೋಗಿ’ ಹಾಗೂ ಕೋಮು ಸೌಹಾರ್ದತೆಗೆ ಶ್ರಮಿಸಿದ ಗಣ್ಯರಿಗೆ ‘ಭಾವೈಕ್ಯ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.
ಧಾರವಾಡ ವಿಶ್ವವಿದ್ಯಾಲಯದ ಮೂಲಕ ಪೂರ್ಣಗೊಂಡಿರುವ ಸಮಾಜದ ಕುಲಶಾಸ್ತ್ರೀಯ ಅಧ್ಯಯನ ವರದಿಯ ಆಧಾರದಲ್ಲಿ ನ್ಯಾಯ ಒದಗಿಸಬೇಕು. ಸಮಾಜದ ಅಭಿವೃದ್ಧಿಗಾಗಿ ಘೋಷಿಸಿರುವ ನಿಗಮದ ಕಾರ್ಯಚಟುವಟಿಕೆಗಳಿಗೆ ವೇಗ ನೀಡಬೇಕು ಹಾಗೂ ನದಾಫ್ ಪಿಂಜಾರ ಅಧ್ಯಯನ ಪೀಠ ಸ್ಥಾಪನೆಗೆ 2.50 ಕೋಟಿ ಕಾರ್ಪಸ್ ನಿಧಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಒಳಮೀಸಲಾತಿ, ಪ್ರವರ್ಗ-1 ಪ್ರಮಾಣಪತ್ರದ ಸಮಸ್ಯೆ ನಿವಾರಣೆ, ವೃತ್ತಿಪರ ತರಬೇತಿ, ಉನ್ನತ ಶಿಕ್ಷಣ ಶುಲ್ಕ ರಿಯಾಯಿತಿ ಹಾಗೂ ರಾಜಕೀಯ ಪ್ರಾತಿನಿಧ್ಯ ಸೇರಿದಂತೆ ಸಮಾಜದ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ನವೆಂಬರ್ 8ರಂದು ನಡೆಯುವ ಸಂಸ್ಥಾಪನಾ ದಿನಾಚರಣೆಗೆ ಜನಪ್ರತಿನಿಧಿಗಳು ಹಾಗೂ ಗಣ್ಯರನ್ನು ಆಹ್ವಾನಿಸಿ, ಸಮಾಜದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು. ಕಾರ್ಯಕ್ರಮದ ಯಶಸ್ಸಿಗೆ ಮಾಧ್ಯಮಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯದರ್ಶಿ ರಿಯಾಜ್ ಸಲೀಂ, ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ಮೌಲಾಲಿ, ಜಿಲ್ಲಾ ಕಾರ್ಯದರ್ಶಿ ಪಿ. ನೂರ್‌ಭಾಷಾ, ಬಳ್ಳಾರಿ ವಿಭಾಗೀಯ ಉಪಾಧ್ಯಕ್ಷ ಪಿ. ಷಾಷಾಬ್, ಕಾರ್ಯಕಾರಿ ಸಮಿತಿ ಸದಸ್ಯರಾದ ದಾದಾ ಖಲಂದರ್, ಅಲ್ಲಬಕಾಷ್, ಮಸ್ತಾನ್ ವಲಿ, ಮಹಿಳಾ ಮುಖಂಡರಾದ ಪಿ. ಅಮೀನಾ, ಮಹಿಳಾ ಕಾರ್ಯದರ್ಶಿ ರಜೀಯಾ, ಬಳ್ಳಾರಿ ನಗರ ಅಧ್ಯಕ್ಷ ಜಿ.ಪಿ. ನಬೀಸಾಬ್, ನಗರ ಕಾರ್ಯದರ್ಶಿ ಅಲ್ಲಭಕಾಶ್ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.