ಹೈಲೈಟ್ಸ್:
ನಾಳೆಯಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಮೇ 18ರವರೆಗೆ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ
ಮೇ 15ರಂದು ರಾಜ್ಯದ 7 ಜಿಲ್ಲೆಗಳಿಗೆ ಭಾರಿ ಮಳೆಯ ಹಿನ್ನೆಲೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ
ಕೊಡಗು, ಮೈಸೂರು, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಮತ್ತು ಆಲಿಕಲ್ಲು ಮಳೆಯ ಸಾಧ್ಯತೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು: ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವೆಡೆ ಪೂರ್ವ ಮುಂಗಾರು ಚಟುವಟಿಕೆ ತೀವ್ರಗೊಂಡಿದೆ. ನಾಳೆ ಮಳೆಯ ತೀವ್ರತೆ ಇನ್ನಷ್ಟು ಹೆಚ್ಚಾಗುವ ಮುನ್ಸೂಚನೆ ಇದ್ದು, ಮೇ 18ರವರೆಗೆ ದಕ್ಷಿಣ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ. ಇದೇ ವೇಳೆ ಕೊಡಗು ಜಿಲ್ಲೆಯಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಇಲಾಖೆ ಮೇ 14 ಮಧ್ಯಾಹ್ನ 2 ಗಂಟೆಗೆ ನೌಕಾಸ್ಟ್ ಅಲರ್ಟ್ ಪ್ರಕಟಿಸಿದೆ.
ನಾಳೆ ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ?
ಮೇ 15ರಂದು ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಮತ್ತು ಆಲಿಕಲ್ಲು ಮಳೆಯ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 16ರಂದು ಎಲ್ಲೆಲ್ಲಿ ಮಳೆ?
ಮೇ 16ರಿಂದ ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಕರ್ನಾಟಕದ ಕೆಲ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದ್ದರೂ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಚಾಮರಾಜನಗರ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮತ್ತು ಆಲಿಕಲ್ಲು ಮಳೆಯ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿರಲಿದೆ.
ಮೇ 17 ಮತ್ತು 18ರಂದು ಹವಾಮಾನ ಹೇಗಿರಲಿದೆ?
ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದೆ. ಆದರೆ ದಕ್ಷಿಣ ಒಳನಾಡಿನ ಕೊಡಗು, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆ, ಗುಡುಗು ಹಾಗೂ ಬಿರುಗಾಳಿ ಮುಂದುವರಿಯುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದಲ್ಲಿಯೂ ಮೇ 18ರವರೆಗೆ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ ಐದು ದಿನಗಳಲ್ಲಿ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಕಾಣಿಸಿಕೊಳ್ಳುವುದಿಲ್ಲ ಎಂದು ಇಲಾಖೆ ತಿಳಿಸಿದೆ.
ಮುಂಗಾರು ಪ್ರವೇಶಕ್ಕೆ ವಾತಾವರಣ ಅನುಕೂಲ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಭಾಗದಲ್ಲಿ ನೈರುತ್ಯ ಮುಂಗಾರು ಪ್ರವೇಶಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ದುರಂತ
ಲಖನೌ: ಉತ್ತರ ಪ್ರದೇಶದಲ್ಲಿ ಬುಧವಾರ ಸಂಜೆ ಸುರಿದ ಭಾರಿ ಬಿರುಗಾಳಿ ಮತ್ತು ಮಳೆಯಿಂದ 89 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭದೋಹಿ, ಬದೌನ್, ಫತೇಪುರ್ ಮತ್ತು ಸೋನಭದ್ರ ಜಿಲ್ಲೆಗಳಲ್ಲಿ ಮನೆಗಳು, ಶಾಲಾ ಕಟ್ಟಡಗಳು ಮತ್ತು ಸೇತುವೆಗಳು ಕುಸಿದು ವ್ಯಾಪಕ ಹಾನಿ ಉಂಟಾಗಿದೆ. ಅನೇಕ ಕಡೆ ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಮೊಬೈಲ್ ನೆಟ್‌ವರ್ಕ್ ವ್ಯವಸ್ಥೆಯೂ ಸ್ಥಗಿತಗೊಂಡಿದೆ. ಇದರಿಂದ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.