ಮಂಗಳೂರು, ಮೇ 13: ಕರಾವಳಿ ಭಾಗದಲ್ಲಿ ಮಾದಕ ದ್ರವ್ಯ ಜಾಲ ದಿನದಿಂದ ದಿನಕ್ಕೆ ವ್ಯಾಪಕವಾಗುತ್ತಿರುವ ನಡುವೆಯೇ, ಮುಲ್ಕಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಭಾರೀ ಪ್ರಮಾಣದ ಡ್ರಗ್ಸ್ ಪತ್ತೆಯಾಗಿದೆ. ಚೆನ್ನೈನಿಂದ ಮಂಗಳೂರಿಗೆ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಬಂಧಿಸುವ ಮೂಲಕ ಪೊಲೀಸರು ಮಹತ್ವದ ಸುಳಿವು ಪಡೆದಿದ್ದಾರೆ.
ಮುಖ್ಯಾಂಶಗಳು
-
ಚೆನ್ನೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟಕ್ಕೆ ಯತ್ನಿಸಿದ್ದ ವಿದ್ಯಾರ್ಥಿನಿ ಬಂಧನ.
-
ಆರೋಪಿಯಿಂದ 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ವಶ.
-
ಬಂಧಿತ ಯುವತಿಯ ವಿರುದ್ಧ ಈಗಾಗಲೇ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಪ್ರಕರಣ ದಾಖಲು.
ಏನಾಯಿತು?
ಬಂಧಿತ ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಸುಹಾನ (21) ಎಂದು ಗುರುತಿಸಲಾಗಿದೆ. ಕುಂದಾಪುರದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ BCA ವ್ಯಾಸಂಗ ಮಾಡುತ್ತಿದ್ದ ಈಕೆ, ಮಂಗಳವಾರ (ಮೇ 12) ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಮುಂದಾಗಿದ್ದ ವೇಳೆ ಪಣಂಬೂರು ಎಸಿಪಿ ತಂಡ ಮತ್ತು ಮುಲ್ಕಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಏನು ವಶಕ್ಕೆ ಸಿಕ್ಕಿತು?
ಪೊಲೀಸರು ಆರೋಪಿಯಿಂದ ಸುಮಾರು 1 ಕೆಜಿ 42 ಗ್ರಾಂ ತೂಕದ, ಅಂದಾಜು 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಮೊಬೈಲ್ ಫೋನ್ ಹಾಗೂ ಇತರ ಪ್ರಮುಖ ದಾಖಲೆಗಳನ್ನು ಕೂಡ ಜಪ್ತಿ ಮಾಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಸುಹಾನ ಚೆನ್ನೈನಿಂದ ಈ ಮಾದಕ ವಸ್ತು ತಂದು ಮಂಗಳೂರಿನ ಕಾಲೇಜು ವಿದ್ಯಾರ್ಥಿಗಳು ಮತ್ತು ಶ್ರೀಮಂತ ಗ್ರಾಹಕರಿಗೆ ಮಾರಾಟ ಮಾಡಲು ಯೋಜನೆ ರೂಪಿಸಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ.
ಹಿಂದಿನ ಪ್ರಕರಣಗಳ ಮಾಹಿತಿ
21 ವರ್ಷದ ಸುಹಾನ ಈಗಾಗಲೇ ಹಲವು ಮಾದಕ ದ್ರವ್ಯ ಸಂಬಂಧಿತ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಈಕೆಯ ವಿರುದ್ಧ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ವಿಭಾಗದಲ್ಲಿಯೂ ಡ್ರಗ್ಸ್ ಸಾಗಾಟ ಪ್ರಕರಣವಿದೆ ಎಂದು ತಿಳಿದುಬಂದಿದೆ. ಸದ್ಯ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಹೊಸ ಪ್ರಕರಣ ದಾಖಲಾಗಿದ್ದು, ಈ ಜಾಲದ ಹಿಂದೆ ಇರುವ ಇತರ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.