ಬಳ್ಳಾರಿ, ಅ.15: ಕನ್ನಡ ಸಾಹಿತ್ಯ ಪರಿಷತ್ತಿನ ಐತಿಹಾಸಿಕ ಪರಂಪರೆ, ಘನತೆ ಹಾಗೂ ಕನ್ನಡಪರ ಆಶಯಗಳನ್ನು ಉಳಿಸಿ ಬೆಳೆಸಲು ಜಾಣಗೆರೆ ವೆಂಕಟರಾಮಯ್ಯ ಸೂಕ್ತ ಅಭ್ಯರ್ಥಿಯಾಗಿದ್ದಾರೆ ಎಂದು ಸಿದ್ದರಾಮಯ್ಯ ಹಾಗೂ ವಸುಂದರಾ ಭೂಪತಿ ಅಭಿಪ್ರಾಯಪಟ್ಟರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತು ಕೇವಲ ಸಾಹಿತ್ಯ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಕನ್ನಡಿಗರ ಹಿತಾಸಕ್ತಿಗಳ ರಕ್ಷಣೆಗೆ ಆದ್ಯತೆ ನೀಡಬೇಕು ಎಂದರು.
ಕನ್ನಡ–ಕನ್ನಡಿಗ–ಕರ್ನಾಟಕದ ಹಿತಾಸಕ್ತಿಗಳನ್ನು ಕೇಂದ್ರವಾಗಿಟ್ಟುಕೊಂಡು ಪರಿಷತ್ತಿಗೆ ಹೊಸ ಚೈತನ್ಯ ನೀಡುವ ಉದ್ದೇಶದಿಂದ ಜಾಣಗೆರೆ ವೆಂಕಟರಾಮಯ್ಯ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಅವರ ಪ್ರಯತ್ನಕ್ಕೆ ಕನ್ನಡಪರ ಸಂಘಟನೆಗಳು, ಸಾಹಿತಿಗಳು, ಕಲಾವಿದರು ಹಾಗೂ ಸಾಹಿತ್ಯಾಸಕ್ತರು ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಾಣಗೆರೆ ವೆಂಕಟರಾಮಯ್ಯ, ಶೇಖರ್ ಗೌಡ, ಹಂಪನ ಗೌಡ, ಸುರೇಶ, ಚಂದ್ರಶೇಖರ್ ಆಚಾರ್ ಹಾಗೂ ಶಿವಲಿಂಗಪ್ಪ ಉಪಸ್ಥಿತರಿದ್ದರು.