ಬೆಳಗಾವಿ: ಮಹಿಳೆಯರು ಸಾಮಾಜಿಕ ಹಾಗೂ ಆರ್ಥಿಕವಾಗಿ ಪ್ರಗತಿ ಸಾಧಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮ ಪೂರಕವಾಗಿದೆ. ಮಹಿಳೆಯರು ದುಂದುವೆಚ್ಚಕ್ಕೆ ಕಡಿವಾಣ ಹಾಕಿ, ಮಿತವ್ಯಯದ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದರೊಂದಿಗೆ ಪರಿಸ್ಥಿತಿಗೆ ತಕ್ಕಂತೆ ಹೊಂದಾಣಿಕೆ ಮಾಡಿಕೊಂಡು ನೆಮ್ಮದಿಯ ಜೀವನ ನಡೆಸಬೇಕು ಎಂದು ಧಾರವಾಡ ಪ್ರಾದೇಶಿಕ ನಿರ್ದೇಶಕ ದಯಾಶೀಲ ಹೇಳಿದರು.
ತಾಲೂಕಿನ ತಾರಿಹಾಳ ಗ್ರಾಮದ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಮಂಗಲ ಕಾರ್ಯಾಲಯದಲ್ಲಿ ಖಾಸಬಾಗದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಆಯೋಜಿಸಿದ್ದ ತಾಲೂಕು ಮಟ್ಟದ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂಸ್ಕಾರದ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸುವಲ್ಲಿ ತಾಯಂದಿರ ಪಾತ್ರ ಮಹತ್ವದ್ದಾಗಿದೆ. ಉತ್ತಮ ಜೀವನ ನಿರ್ವಹಣೆ, ಕುಟುಂಬದ ಜವಾಬ್ದಾರಿ ಹಾಗೂ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವಲ್ಲಿ ಮಹಿಳೆಯರು ವಿಶೇಷ ಕಾಳಜಿ ವಹಿಸಬೇಕು. ಜ್ಞಾನವಿಕಾಸ ಕೇಂದ್ರಗಳ ಮೂಲಕ ಮಹಿಳೆಯರಲ್ಲಿ ಅರಿವು ಮೂಡಿಸುವುದರ ಜತೆಗೆ ನೆಮ್ಮದಿಯ ಜೀವನಕ್ಕೆ ಅಗತ್ಯವಾದ ತಿಳಿವಳಿಕೆ ನೀಡಲಾಗುತ್ತಿದೆ. ಕೇಂದ್ರಗಳ ಮೂಲಕ ಅನುಷ್ಠಾನಗೊಳ್ಳುತ್ತಿರುವ ವಿವಿಧ ಕಾರ್ಯಕ್ರಮಗಳ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸುರೇಖಾ ಡಿ. ಪಾಟೀಲ ಮಾತನಾಡಿ, ಕುಟುಂಬ ನಿರ್ವಹಣೆಯಲ್ಲಿ ತಾಯಂದಿರ ಜವಾಬ್ದಾರಿ ಮಹತ್ವದ್ದಾಗಿದೆ. ಮಹಿಳೆಯರು ಮಾನಸಿಕ ಒತ್ತಡದಿಂದ ಹೊರಬಂದು ನೆಮ್ಮದಿಯ ಜೀವನ ನಡೆಸಲು ಪ್ರಯತ್ನಿಸಬೇಕು. ಮಕ್ಕಳಿಗೆ ಕೇವಲ ಉಪದೇಶ ನೀಡುವುದಷ್ಟೇ ಅಲ್ಲದೆ, ತಿಳಿವಳಿಕೆ ಹಾಗೂ ಅರಿವಿನ ಮೂಲಕ ಉತ್ತಮ ಮೌಲ್ಯಗಳನ್ನು ಬೆಳೆಸುವುದು ಅಗತ್ಯವಾಗಿದೆ ಎಂದರು.
ಬೆಳಗಾವಿ ಜಿಲ್ಲಾ ನಿರ್ದೇಶಕ ಸತೀಶ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ, ಜ್ಞಾನವಿಕಾಸ ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವವನ್ನು ವಿವರಿಸಿದರು. ಅಂಜನಾ ರಾಯ್ಕರ್ ಮತ್ತು ವಿರೂಪಾಕ್ಷ ಇಟಗಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ಮಹಾದೇವಿ ಇಟಗಿ ಮಾತನಾಡಿ, ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಹಲವು ವಿಷಯಗಳನ್ನು ತಿಳಿದುಕೊಳ್ಳಲು ಸಾಧ್ಯವಾಗಿದೆ. ಮಹಿಳೆಯರ ಜ್ಞಾನವರ್ಧನೆ ಹಾಗೂ ಸಬಲೀಕರಣಕ್ಕೆ ಅವಕಾಶ ಕಲ್ಪಿಸಿರುವ ಮಾತೃಶ್ರೀ ಹೇಮಾವತಿ ಅಮ್ಮನವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.
ತಾಲೂಕು ಯೋಜನಾಧಿಕಾರಿ ಸುಭಾಷ್ ಪಿ.ಸಿ. ಸ್ವಾಗತಿಸಿದರು. ಗೀತಾ ನಿರೂಪಿಸಿದರು. ವಲಯ ಮೇಲ್ವಿಚಾರಕಿ ಲಕ್ಷ್ಮವ್ವ ವಂದಿಸಿದರು. ಕಾರ್ಯಕ್ರಮದಲ್ಲಿ 600ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು.