Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಜನಾಕ್ರೋಶ

ಪ್ರಕಾಶ ರಾಜ್, ಧ್ರುವ ರಾಠಿ, ದೇವನೂರ ಮಹಾದೇವ ಭಾಗಿ

news_1791455082_0_169.webp

 

news_1791455082_1_286.webp

 

news_1791455082_2_507.webp

ಬೆಂಗಳೂರು, ಅ. 8 (ಸಮದರ್ಶಿ ಸುದ್ದಿ): ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ ಕುಮಾರ ರಾಜೀನಾಮೆ ನೀಡಬೇಕು ಹಾಗೂ ವಿದ್ಯುನ್ಮಾನ ಮತಯಂತ್ರಗಳ ಬದಲಿಗೆ ಮತಪತ್ರಗಳ ಮೂಲಕ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ಗುರುವಾರ ನಗರದ ಫ್ರೀಡಂ ಪಾರ್ಕ್‌ನಲ್ಲಿ  ಸಾವಿರಾರು ಬೃಹತ್ ಪ್ರತಿಭಟನೆ ನಡೆಸಿದರು.

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ವಿವಿಧ ಪ್ರಗತಿಪರ ಸಂಘಟನೆಗಳು ಹಾಗೂ ನಾಗರಿಕ ಹಕ್ಕುಗಳ ವೇದಿಕೆಗಳು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ನಟ ಪ್ರಕಾಶ ರಾಜ್, ಯೂಟ್ಯೂಬರ್ ಧ್ರುವ ರಾಠಿ, ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ, ಸಾಹಿತಿ ದೇವನೂರ ಮಹಾದೇವ ಹಾಗೂ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಪರಕಾಲ ಪ್ರಭಾಕರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ಗಮನ ಸೆಳೆಯಿತು.

ಜರ್ಮನಿಯಲ್ಲಿ ನೆಲೆಸಿರುವ ಧ್ರುವ ರಾಠಿ ಭಾರತದಲ್ಲಿ ಮೊದಲ ಬಾರಿಗೆ ಸಾರ್ವಜನಿಕ ಪ್ರತಿಭಟನೆಯಲ್ಲಿ ಭಾಗವಹಿಸಿದರು. ಯುವಜನರು, ವಿದ್ಯಾರ್ಥಿಗಳು, ಮಹಿಳೆಯರು, ರೈತ ಸಂಘಟನೆಗಳ ಪ್ರತಿನಿಧಿಗಳು ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಎಸ್‌ಐಆರ್‌ ಸಂತ್ರಸ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ವಿಶೇಷವಾಗಿ ‘ಜೆನ್‌ ಝಡ್‌’ ಯುವಜನರ ಭಾಗವಹಿಸುವಿಕೆ ಗಮನಾರ್ಹವಾಗಿತ್ತು.

ಚುನಾವಣಾ ಆಯೋಗವು ಕೇಂದ್ರದ ಎನ್‌ಡಿಎ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ತೆಗೆದುಹಾಕುವ ಮೂಲಕ ಪ್ರಜಾಪ್ರಭುತ್ವದ ಮೂಲಭೂತ ಹಕ್ಕುಗಳಿಗೆ ಧಕ್ಕೆ ತರಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಐಆರ್‌ ಪ್ರಕ್ರಿಯೆಯಿಂದ ತೊಂದರೆಗೊಳಗಾದವರ ಅನುಭವಗಳನ್ನು ಆಲಿಸಲು ಪ್ರತಿಭಟನೆಯ ಭಾಗವಾಗಿ ‘ಜನತಾ ನ್ಯಾಯಮಂಡಳಿ’ ಆಯೋಜಿಸಲಾಗಿತ್ತು. ಮತದಾರರ ಪಟ್ಟಿಯಿಂದ ಅನ್ಯಾಯವಾಗಿ ಹೆಸರು ತೆಗೆದುಹಾಕಲಾಗಿದೆ ಎಂದು ಆರೋಪಿಸಿರುವ ಕರ್ನಾಟಕದ ವಿವಿಧ ಜಿಲ್ಲೆಗಳ ಜನರು ತಮ್ಮ ಅಹವಾಲುಗಳನ್ನು ಮಂಡಿಸಲು ಅವಕಾಶ ಕಲ್ಪಿಸಲಾಗಿತ್ತು.

ಸಿಜೆಪಿ ಮುಖಂಡ ಅಶುತೋಷ ರಂಕಾ ಮಾತನಾಡಿ, ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಸಮಸ್ಯೆಗಳನ್ನು ಆಲಿಸಿ, ಅವರ ಹಕ್ಕುಗಳ ರಕ್ಷಣೆಗೆ ಧ್ವನಿಯೆತ್ತುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.

ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವುದಾಗಿ ಆರೋಪಿಸಿದ ಮಹಿಳಾ ಪತ್ರಕರ್ತರಿಗೆ ಬೆಂಬಲ ಸೂಚಿಸಲು ‘ಚಪ್ಪಲಿ ಪ್ರತಿಭಟನೆ’ ನಡೆಸುವುದಾಗಿಯೂ ಸಂಘಟಕರು ಘೋಷಿಸಿದರು.

ಘೋಷಣೆಗಳಿಂದ ಮೊಳಗಿದ ಫ್ರೀಡಂ ಪಾರ್ಕ್

ಬೆಳಗ್ಗೆಯಿಂದಲೇ ಪ್ರತಿಭಟನಾಕಾರರು ಕ್ರೀಡಾಂಗಣದತ್ತ ಆಗಮಿಸಲಾರಂಭಿಸಿದರು. ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ) ಕಾರ್ಯಕರ್ತರು ಆರಂಭಿಕ ವ್ಯವಸ್ಥೆಗಳನ್ನು ನಿರ್ವಹಿಸಿದರು. ರಾಷ್ಟ್ರಧ್ವಜ ಹಾಗೂ ಕರ್ನಾಟಕದ ಧ್ವಜಗಳನ್ನು ಹಿಡಿದಿದ್ದ ಪ್ರತಿಭಟನಾಕಾರರು ‘ಜನವಿರೋಧಿ ಎಸ್‌ಐಆರ್‌ ರದ್ದಾಗಲಿ’, ‘ಇಂಕ್ವಿಲಾಬ್ ಜಿಂದಾಬಾದ್’ ಹಾಗೂ ‘ಗ್ಯಾನೇಶ ಕುಮಾರ ರಾಜೀನಾಮೆ ನೀಡಲಿ’ ಎಂದು ಘೋಷಣೆ ಕೂಗಿದರು.

‘ನಮ್ಮ ಹೆಸರು ಅಳಿಸಬೇಡಿ, ನಮ್ಮ ಮಾತು ಆಲಿಸಿ’, ‘ಮತ ಕಳ್ಳತನ ನಿಲ್ಲಿಸಿ’, ‘ಸರ್ವಾಧಿಕಾರ ಸಹಿಸುವುದಿಲ್ಲ’ ಹಾಗೂ ‘ಗ್ರ್ಯಾಂಡ್ ಥೆಫ್ಟ್ ಡೆಮಾಕ್ರಸಿ’ ಎಂಬ ಸಂದೇಶಗಳಿದ್ದ ಫಲಕಗಳು ಗಮನ ಸೆಳೆದವು. ಭಗತ್ ಸಿಂಗ್ ಮತ್ತು ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಗಳನ್ನೂ ಪ್ರದರ್ಶಿಸಲಾಯಿತು.

ವಿಜಯಪುರ ಜಿಲ್ಲೆಯಲ್ಲಿ ರೈತರ ಭೂಸ್ವಾಧೀನ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೂ ಪ್ರತಿಭಟನಾಕಾರರು ಬೆಂಬಲ ವ್ಯಕ್ತಪಡಿಸಿದರು.

ಡಿವೈಎಫ್‌ಐ, ಆಮ್ ಆದ್ಮಿ ಪಕ್ಷ, ಯಂಗ್ ಡೆಮಾಕ್ರಾಟ್ಸ್ ಸೇರಿದಂತೆ ಹಲವು ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಮಹಾತ್ಮ ಗಾಂಧಿ ಪ್ರತಿಪಾದಿಸಿದ ಅಹಿಂಸಾತ್ಮಕ ಹೋರಾಟದ ಮಾರ್ಗವನ್ನು ಮುಂದುವರಿಸುವುದಾಗಿ ಮುಖಂಡರು ತಿಳಿಸಿದರು.

ಅ.10ರಂದು ದೆಹಲಿಯಲ್ಲಿ ಮತ್ತೊಂದು ಬೃಹತ್ ಪ್ರತಿಭಟನೆ

ಬೆಂಗಳೂರಿನ ಪ್ರತಿಭಟನೆಯು ಅಕ್ಟೋಬರ್ 10ರಂದು ಹೊಸದಿಲ್ಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಯುವಜನರ ಬೃಹತ್ ಹೋರಾಟಕ್ಕೆ ಪೂರ್ವಭಾವಿಯಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಹಿಂದೆ ಅಕ್ಟೋಬರ್ 2ರಂದು ಮುಂಬೈಯಲ್ಲಿಯೂ ಸಿಜೆಪಿ ಪ್ರತಿಭಟನೆ ನಡೆಸಿತ್ತು. ದೆಹಲಿಯಲ್ಲಿ ಪ್ರತಿಭಟನಾಕಾರರನ್ನು ಸಾಮೂಹಿಕವಾಗಿ ವಶಕ್ಕೆ ಪಡೆಯುತ್ತಿರುವುದನ್ನು ಖಂಡಿಸಿದ ಅಭಿಜೀತ ದೀಪ್ಕೆ, ಜನರನ್ನು ಬಂಧಿಸುವ ಮೂಲಕ ಭಿನ್ನಮತದ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಬಂಧನಗಳು ಹೆಚ್ಚಾದಷ್ಟೂ ಪ್ರತಿಭಟನೆಯಲ್ಲಿ ಭಾಗವಹಿಸುವವರ ಸಂಖ್ಯೆಯೂ ಹೆಚ್ಚಲಿದೆ ಎಂದು ಎಚ್ಚರಿಸಿದರು.

ವಿದ್ಯಾರ್ಥಿ ಸಂಘಟನೆಗಳ ಮುಖಂಡರಾದ ಐಶೆ ಘೋಷ್ ಮತ್ತು ನೇಹಾ ಬೋರಾ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಾಶ ರಾಜ್ ಮುಂಚಿತವಾಗಿ ಪ್ರಕಟಿಸಿದ್ದರು.

ಇದಕ್ಕೂ ಮುನ್ನ ಬುಧವಾರ ದೆಹಲಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಎಸ್‌ಐಆರ್‌ ವಿರೋಧಿ ಪ್ರತಿಭಟನೆಯನ್ನು ಪೊಲೀಸರು ತಡೆದಿದ್ದರು. ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ವಿರೋಧ ಪಕ್ಷಗಳ ಸಂಸದರನ್ನು ಬಲವಂತವಾಗಿ ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಲಾಗಿತ್ತು.

ಬೆಂಗಳೂರಿನ ಪ್ರತಿಭಟನೆ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ