ಬೆಂಗಳೂರು: ಅತಿಥಿ ಉಪನ್ಯಾಸಕಿಯರಿಗೂ ಋತುಚಕ್ರ ರಜೆ ಮಂಜೂರು ಮಾಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕಿಯರಿಗೆ ಋತುಚಕ್ರ ರಜೆ ಮಂಜೂರು ಮಾಡಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರಾದ ಮಂಜುಶ್ರೀ ಸುತ್ತೋಲೆ ಹೊರಡಿಸಿದ್ದಾರೆ.
ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕನಿಷ್ಠ 15 ರಿಂದ 19 ಗಂಟೆಗಳ ಕಾಲ ಕಾರ್ಯಭಾರ ನಿರ್ವಹಿಸುವ ಅತಿಥಿ ಉಪನ್ಯಾಸಕರಿಗೆ ಋತುಚಕ್ರ ರಜೆ ಮಂಜೂರು ಮಾಡಲಾಗುವುದು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.
ರಾಜ್ಯದ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಮತ್ತು ಸಂಸ್ಥೆಗಳಲ್ಲಿ 18 ರಿಂದ 52 ವರ್ಷದ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದಂತೆ ವಾರ್ಷಿಕ 12 ದಿನ ವೇತನ ಸಹಿತ ರಜೆ ನೀಡಲು ರಾಜ್ಯ ಸರ್ಕಾರ ಆದೇಶಿಸಿತ್ತು.