ನವದೆಹಲಿ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಉಭಯ ನಾಯಕರು ಭಾರತ ಮತ್ತು ಇಸ್ರೇಲ್ ನಡುವಿನ ದ್ವಿಪಕ್ಷೀಯ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಚರ್ಚಿಸಿದ್ದು, ಪಶ್ಚಿಮ ಏಷ್ಯಾದ ಪ್ರಸಕ್ತ ಬೆಳವಣಿಗೆಗಳ ಕುರಿತು ಅಭಿಪ್ರಾಯ ವಿನಿಮಯ ಮಾಡಿಕೊಂಡಿದ್ದಾರೆ.
ಈ ಕುರಿತು ತಮ್ಮ ಅಧಿಕೃತ 'ಎಕ್ಸ್' (ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, "ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದೆ. ನಮ್ಮ ದ್ವಿಪಕ್ಷೀಯ ಸಂಬಂಧಗಳಲ್ಲಿನ ನಿರಂತರ ಪ್ರಗತಿಯನ್ನು ಪರಿಶೀಲಿಸಿದೆವು ಹಾಗೂ ನಮ್ಮ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸುವ ಬದ್ಧತೆಯನ್ನು ಪುನರುಚ್ಚರಿಸಿದೆವು," ಎಂದು ತಿಳಿಸಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿ ಶಾಂತಿ ಮರುಸ್ಥಾಪನೆಗೆ ಒತ್ತು
ಮುಂದುವರಿದು ಪೋಸ್ಟ್ನಲ್ಲಿ ಮಾಹಿತಿ ನೀಡಿದ ಪ್ರಧಾನಿ, "ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ನಾವು ಪರಸ್ಪರ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡೆವು. ಜೊತೆಗೆ ಆ ಭಾಗದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಮರುಸ್ಥಾಪಿಸುವ ತುರ್ತು ಅಗತ್ಯವನ್ನು ಬಲವಾಗಿ ಒತ್ತಿಹೇಳಿದೆವು," ಎಂದು ಉಲ್ಲೇಖಿಸಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಮತ್ತು ಉದ್ವಿಗ್ನತೆ ಹೆಚ್ಚುತ್ತಿರುವ ಹೊತ್ತಿನಲ್ಲೇ ಈ ದೂರವಾಣಿ ಸಂಭಾಷಣೆ ನಡೆದಿದ್ದು, ಸಂಘರ್ಷ ನಿವಾರಣೆಗೆ ಮಾತುಕತೆ ಹಾಗೂ ರಾಜತಾಂತ್ರಿಕತೆಯೇ ಸೂಕ್ತ ಮಾರ್ಗ ಎಂಬ ಭಾರತದ ನಿಲುವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ.