ಕೊಪ್ಪಳ: ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರು ಒಂದೇ ಕಾಮಗಾರಿಗೆ ಎರಡು ಬಾರಿ ಭೂಮಿ ಪೂಜೆ ನೆರವೇರಿಸುತ್ತಾರೆ ಎಂದು ಬಿಜೆಪಿ ಮುಖಂಡ ಬಸವರಾಜ್ ಕ್ಯಾವಟರ್ ನೀಡಿರುವ ಹೇಳಿಕೆಗೆ ಕಾಂಗ್ರೆಸ್ನ ಪರಿಶಿಷ್ಟ ಜಾತಿ ವಿಭಾಗದ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ಕೊಪ್ಪಳದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಗಾಳೆಪ್ಪ ಪೂಜಾರ, ಬಸವರಾಜ ಕ್ಯಾವಟರ್ ಅವರಿಗೆ ಸಾಮಾನ್ಯ ಜ್ಞಾನವಿಲ್ಲ. ಶಾಸಕರ ವಿರುದ್ಧ ಸುಳ್ಳು ಹೇಳಿಕೆ ನೀಡಿ, ಅವರ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ ತರುವ ಯತ್ನವನ್ನು ತಕ್ಷಣವೇ ನಿಲ್ಲಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಶಾಸಕ ರಾಘವೇಂದ್ರ ಹಿಟ್ನಾಳ ಅವರು ಕ್ಷೇತ್ರಕ್ಕೆ ₹9.5 ಸಾವಿರದಿಂದ ₹10 ಸಾವಿರ ಕೋಟಿಯಷ್ಟು ಬೃಹತ್ ಅನುದಾನ ತಂದು ಅಭಿವೃದ್ಧಿ ಮಾಡಿದ್ದಾರೆ. ಅವರ ವಿರುದ್ಧ ಟೀಕೆ ಮಾಡಲು ಕ್ಯಾವಟರ್ ಅವರ ಕೊಡುಗೆಯೇನು? ಕರೊನಾ ಸಂಕಷ್ಟದ ಸಮಯದಲ್ಲಿ ಅಕ್ರಮ ಎಸಗಿದ ಅವರಿಗೆ ಶಾಸಕರ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ. ರಾಜಕೀಯಕ್ಕೆ ಇತ್ತೀಚೆಗೆ ಬಂದಿರುವ ಡಾ. ಬಸವರಾಜ್ ಕ್ಯಾವಟರ್ ಅವರ ಹಿನ್ನೆಲೆ ಹಾಗೂ ವೃತ್ತಿಜೀವನದ ಸತ್ಯಾಸತ್ಯತೆ ನಮಗೂ ತಿಳಿದಿದ್ದು, ನಾವು ಹೋರಾಟಕ್ಕಿಳಿದರೆ ಅವರು ಜೈಲು ಸೇರಬೇಕಾಗುತ್ತದೆ. ಹೀಗಾಗಿ ಶಾಸಕರ ವಿರುದ್ಧ ಅಪಪ್ರಚಾರ ಮಾಡುವುದನ್ನು ಬಿಟ್ಟು ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದರು.
ಬಳಿಕ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ್ ಮಾತನಾಡಿ, ಶಾಸಕ ರಾಘವೇಂದ್ರ ಹಿಟ್ನಾಳ ಅವರು ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಬಿಜೆಪಿ ನಾಯಕರು ವಾಸ್ತವ ಅರಿತು ಮಾತನಾಡಬೇಕು ಎಂದರು. ಇದೇ ವೇಳೆ ಪ್ರಾಧಿಕಾರದ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಪ್ರಗತಿಯಲ್ಲಿದ್ದು, ಭ್ರಷ್ಟಾಚಾರದ ಹಣವನ್ನು ವಾಪಸ್ ಪಡೆಯಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಹನುಮಂತಪ್ಪ ದೊಡ್ಡಮನಿ, ಮಲ್ಲು ಪೂಜಾರ್, ಪದ್ಮಾವತಿ ಕಂಬಳಿ, ರೇವಪ್ಪ ಬಾರಕೇರ್, ಮಂಜುನಾಥ, ಅಕ್ಬರ್ ಪಾಷಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
*ಅಭಿನಂದನೆ:* ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳನ್ನು ಆಯ್ಕೆ ಮಾಡಿದ್ದಕ್ಕಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ಅವರಿಗೆ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಇದೇ ವೇಳೆ ಅಭಿನಂದನೆ ಸಲ್ಲಿಸಿದರು.