ಬೆಂಗಳೂರು: ಎಲ್ ನಿನೋ ಪ್ರಭಾವದಿಂದ ರಾಜ್ಯ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಕೋಟ್ಯಂತರ ರೂಪಾಯಿ ಅನುದಾನ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಭೇಟಿಗೆ ಮುಖ್ಯಮಂತ್ರಿ ಸಮಯ ಕೇಳಿದರೂ ಅವಕಾಶ ನೀಡುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ.ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನಿಯವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ರಾಜ್ಯದ ಜನರ ಹಿತದೃಷ್ಟಿಯಿಂದ ಶೀಘ್ರದಲ್ಲೇ ಸರ್ವಪಕ್ಷ ನಿಯೋಗಕ್ಕೆ ಭೇಟಿಯ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳನ್ನೂ ಸಮಾನವಾಗಿ ಕಾಣಬೇಕು. ಸಂವಿಧಾನದ ಆಶಯಗಳಿಗೆ ಹಾಗೂ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು ಎಂದರು.
ಗ್ರಾಮ ಪಂಚಾಯಿತಿಗಳಿಗೆ ತಕ್ಷಣ 2,186.20 ಕೋಟಿ ರೂ. ಬಿಡುಗಡೆಗೆ ಆಗ್ರಹ :
15ನೇ ಹಣಕಾಸು ಆಯೋಗದ ಶಿಫಾರಸಿನಂತೆ 2025-26ನೇ ಸಾಲಿನಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ನ್ಯಾಯಯುತವಾಗಿ ನೀಡಬೇಕಾದ 2,186 ಕೋಟಿ ರೂ. ಅನುದಾನವನ್ನು ಕೇಂದ್ರ ಸರ್ಕಾರ ಕ್ಷುಲ್ಲಕ ಕಾರಣ ನೀಡಿ ತಡೆಹಿಡಿದಿದೆ. ಇದು ರಾಜ್ಯಕ್ಕೆ ಮಾಡಿರುವ ಘೋರ ಅನ್ಯಾಯ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದ ಕಾರಣ ರಾಜ್ಯದ 5,927 ಗ್ರಾಮ ಪಂಚಾಯಿತಿಗಳು ಹಣಕಾಸಿನ ಕೊರತೆ ಎದುರಿಸುವಂತಾಗಿದೆ. ಇಂತಹ ಧೋರಣೆ ಗ್ರಾಮ ಪಂಚಾಯಿತಿಗಳ ಮೂಲ ಉದ್ದೇಶವನ್ನೇ ನಾಶ ಮಾಡುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದಿಂದ ಎನ್‌ಡಿಎ ಮೈತ್ರಿಕೂಟದ 19 ಸದಸ್ಯರು ಆಯ್ಕೆಯಾಗಿದ್ದರೂ, ರಾಜ್ಯದ ಹಿತದ ವಿಚಾರದಲ್ಲಿ ಅವರು ತುಟಿ ಬಿಚ್ಚುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.