ವಿಜಯಪುರ,ಅ.೧೪,: ಬರಗಾಲದ ಹಿನ್ನೆಲೆಯಲ್ಲಿ ಗ್ರಾಮೀಣ ಜನರಿಗೆ ಅವಶ್ಯಕತೆಯನುಸಾರ ನಿರಂತರ ಉದ್ಯೋಗಾವಕಾಶ ಕಲ್ಪಿಸುವುದರೊಂದಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ ಪ್ರಕಾಶ ಮೀನಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿಬಿ-ಜಿ ರಾಮ್ ಜಿ, ಗ್ರಾಮೀಣ ವಸತಿ ಯೋಜನೆ, ಸ್ವಚ್ಛ ಭಾರತ ಮಿಷನ್ ಹಾಗೂ ಭಾರತ್ ಜೋಡೋ ಯುವ ಸಂಘಗಳ ನೋಂದಣಿ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಿದರು.
ಗ್ರಾಮೀಣರಿಗೆ ನಿರಂತರ ಉದ್ಯೋಗ ಕಲ್ಪಿಸಲು ಆದ್ಯತೆ: ಜಿಲ್ಲೆಯಲ್ಲಿ ಬರಗಾಲ ಘೋಷಣೆಯಾಗಿರುವುದರಿಂದ ಗ್ರಾಮೀಣ ಭಾಗದಲ್ಲಿ ಉದ್ಯೋಗದ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ನಿಗದಿಪಡಿಸಿರುವ ಮಾನವ ದಿನಗಳ ಗುರಿಯನ್ನು ಸಾಧಿಸಬೇಕು. ಕೂಲಿಕಾರ್ಮಿಕರ ಭಾಗವಹಿಸುವಿಕೆ ಹಾಗೂ ಅರ್ಹರಿಗೆ ನಿರಂತರ ಉದ್ಯೋಗ ಒದಗಿಸಬೇಕು ಎಂದು ಸೂಚಿಸಿದರು.
ಯೋಜನೆಯಡಿ ಕೆಲಸ ನಿರ್ವಹಿಸಿದ ಕೂಲಿಕಾರರಿಗೆ ನಿಗದಿತ ಅವಧಿಯಲ್ಲಿ ಕೂಲಿ ಪಾವತಿಯಾಗುವಂತೆ ಕ್ರಮ ವಹಿಸಬೇಕು. ಕಾಮಗಾರಿ ಸ್ಥಳದಲ್ಲಿ ಹಾಜರಿರುವ ಎಲ್ಲ ಕೂಲಿಕಾರ್ಮಿಕರ ಹಾಜರಾತಿಯನ್ನು ಫೇಸ್ ಅಥೆಂಟಿಕೇಶನ್ ಮೂಲಕ ಎನ್.ಎಂ.ಎಂ.ಎಸ್. ವ್ಯವಸ್ಥೆಯಲ್ಲಿ ಶೇ.೧೦೦ರಷ್ಟು ದಾಖಲಿಸಬೇಕು.
ಸಮುದಾಯ ಕಾಮಗಾರಿಗಳ ಜೊತೆಗೆ ಅರ್ಹ ಫಲಾನುಭವಿಗಳಿಗೆ ವೈಯಕ್ತಿಕ ಕಾಮಗಾರಿಗಳನ್ನು ಒದಗಿಸಿ, ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದರು.
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಬರಗಾಲದ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯತೆ ಹಾಗೂ ನೀರು ಸರಬರಾಜಿನ ಸ್ಥಿತಿಗತಿಗಳನ್ನು ನಿರಂತರವಾಗಿ ಪರಿಶೀಲಿಸಬೇಕು.
ಪೂರೈಕೆಯಲ್ಲಿ ವ್ಯತ್ಯಯ ಕಂಡುಬಂದಲ್ಲಿ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಂಡು, ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಲಭ್ಯವಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ವಸತಿ, ಶೌಚಾಲಯ ನಿರ್ಮಾಣ ಹಾಗೂ ಯುವ ಸಂಘಗಳ ನೋಂದಣಿಗೆ ಒತ್ತು: ಗ್ರಾಮೀಣ ವಸತಿ ಯೋಜನೆಯಡಿ ಬಾಕಿ ಉಳಿದಿರುವ ಮನೆಗಳ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡಿ, ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ನಿಗದಿತ ಗುರಿ ಸಾಧಿಸಬೇಕು ಎಂದರು.
ಭಾರತ್ ಜೋಡೋ ಯುವ ಸಂಘಗಳ ನೋಂದಣಿ ಪ್ರಕ್ರಿಯೆಯನ್ನು ಚುರುಕುಗೊಳಿಸಿ, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಎಲ್ಲ ಯೋಜನೆಗಳ ಅನುಷ್ಠಾನದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಅವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಯೋಜನಾ ನಿರ್ದೇಶಕ ಅಶೋಕ ಕಲಘಟಗಿ, ಜಿಲ್ಲಾ ಮಟ್ಟದ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು, ಜಿಲ್ಲೆಯ ಎಲ್ಲ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಜಿಲ್ಲಾ ಪಂಚಾಯತಿಯ ಅಧಿಕಾರಿ, ಸಿಬ್ಬಂದಿ ಮತ್ತು ವಿಬಿ-ಜಿ ರಾಮ್ ಜಿ ಯೋಜನೆಯ ಸಿಬ್ಬಂದಿ ಉಪಸ್ಥಿತರಿದ್ದರು.